ಧಾರವಾಡ: ರೈತ ಮಹಿಳೆಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು ಸಚಿವರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.
ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ: ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಕೋಲಾರ ಜಿಲ್ಲೆಗೆ ಭೇಟಿ ನೀಡಿದಾಗ ಕೆರೆ ಒತ್ತುವರಿ ತೆರವಿಗೆ ಒತ್ತಡ ಹಾಕಲು ಮುಂದಾದ ರೈತ ಹೋರಾಟಗಾರ್ತಿಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ರೈತ ಮಹಿಳೆಗೆ ಅವಾಚ್ಯ ಶಬ್ದ ಬಳಸಿ ಉದ್ದಟತನ ಮೆರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಮಾಧುಸ್ವಾಮಿ ಸಾರ್ವಜನಿಕವಾಗಿ ಕ್ಷಮೆ ಕೋರಬೇಕು. ಇಂತಹ ಅಸಂಸ್ಕಾರಯುತ ಸಚಿವರು ಈಗಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.