ಹುಬ್ಬಳ್ಳಿ/ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನಿನ್ನೆಯಷ್ಟೇ ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡ ಸಾಧಿಕ್ ಗುಡವಾಲಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯನ್ನು ಪರಿಶೀಲನೆ ನಡೆಸಿದ ಬೆಂಗಳೂರು ಹೈಕೋರ್ಟ್ ಪೀಠ ಈ ತೀರ್ಪು ನೀಡಿದೆ. ಗಣೇಶೋತ್ಸವ ಪ್ರತಿಷ್ಠಾಪನೆಗೆ ಅರ್ಜಿ ಕುರಿತು ನಿರ್ಧರಿಸುವ ಅಧಿಕಾರವನ್ನು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಿಗೆ ನೀಡಿದೆ.
ವ್ಯಾಪಕ ಭದ್ರತೆ : ಹುಬ್ಬಳ್ಳಿ ಈದ್ಗಾ ಮೈದಾನದ ಸುತ್ತ ಪೊಲೀಸ್ ಸರ್ಪಗಾವಲು ಇದೆ. ಇದರ ಜೊತೆ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜನೆ ಮಾಡಲಾಗಿದೆ. ಈದ್ಗಾ ಮೈದಾನವನ್ನು ಎರಡು ಭಾಗವಾಗಿ ಇಬ್ಭಾಗ ಮಾಡಲಾಗಿದ್ದು, ಗಣೇಶೋತ್ಸವ ಮಾಡಲು ನಿಗದಿಪಡಿಸಿದ ಸ್ಥಳವನ್ನು ಪ್ರತ್ಯೇಕಿಸಿ ಬ್ಯಾರಿಕೇಡ್ ಹಾಕಲಾಗಿದೆ. ಈದ್ಗಾ ಆವರಣದ ಒಳಗೆ ಮತ್ತು ಈದ್ಗಾ ಆವರಣದ ಹೊರಗೆ ಎಸಿಪಿ ಮಟ್ಟದ ಅಧಿಕಾರಿಗಳಿಂದ ಭದ್ರತೆಯನ್ನು ಒದಗಿಸಲಾಗಿದೆ. ಮೈದಾನದ ಸುತ್ತ ಪೊಲೀಸರು ಅಲರ್ಟ್ ಆಗಿದ್ದಾರೆ.
ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಉತ್ಸವಕ್ಕೆ ಅವಕಾಶ ನೀಡಲಾಗಿದೆ. ಇದನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲು ಏರಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದ್ದು, ಈಗ ಕಮಿಷನರ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನ: ಮೂರು ದಿನ ಗಣೇಶೋತ್ಸವ ಆಚರಣೆಗೆ ಅವಕಾಶ