ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿನಯ್ ಕುಲಕರ್ಣಿಗೆ ವಿಧಿಸಿದ್ದ ಷರತ್ತುಗಳನ್ನು ಸಡಿಲಿಸಲು ನಿರಾಕರಿಸಿತು.
ವಿಚಾರಣೆಯಲ್ಲಿ ಸಿಬಿಐ ಪರ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಅರ್ಜಿದಾರರ ವಿರುದ್ಧ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪವಿದೆ. ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿಲ್ಲ. ಸುಪ್ರೀಂ ಕೋರ್ಟ್ ಸಹ ಆರೋಪಿಯ ಜಾಮೀನು ಷರತ್ತು ಸಡಿಲಿಕೆಯ ಮನವಿ ತಿರಸ್ಕರಿಸಿದೆ ಎಂದು ನ್ಯಾಯ ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಕುಲಕರ್ಣಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. 9 ತಿಂಗಳ ಕಾಲ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಷರತ್ತು ವಿಧಿಸಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಶಾಸಕರಿಗೆ ಇದೇ ವೇಳೆ ನಿರ್ಬಂಧ ವಿಧಿಸಲಾಗಿತ್ತು.
ಧಾರವಾಡ ಜಿಲ್ಲೆಗೆ ಭೇಟಿ ನೀಡಲು ಅವಕಾಶ ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿ ನ್ಯಾಯಾಲಯ, ಜಾಮೀನು ಷರತ್ತು ಸಡಿಲಿಸಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.ಇದೀಗ ಹೈಕೋರ್ಟ್ ಕೂಡ ಷರತ್ತು ಸಡಿಲಿಸಲು ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ. ಈ ಮೂಲಕ ಧಾರವಾಡ ಜಿಲ್ಲೆಯಿಂದ ವಿನಯ್ ಕುಲಕರ್ಣಿ ಹೊರಗುಳಿಯಬೇಕಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದರಿಂದಾಗಿ ಧಾರವಾಡ ಪ್ರವೇಶಕ್ಕೆ ಅವಕಾಶ ನೀಡುವಂತೆ ಈ ಮೊದಲು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ ಹೈಕೋರ್ಟ್ ಅವಕಾಶ ನೀಡಿರಲಿಲ್ಲ. ಪರಿಣಾಮವಾಗಿ ಧಾರವಾಡ ಜಿಲ್ಲೆಯಿಂದ ಹೊರಗಿದ್ದುಕೊಂಡು ಸ್ಪರ್ಧಿಸಿ ಗೆದ್ದಿದ್ದರು.
ಇದನ್ನೂ ಓದಿ: ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೊಲೆ ಕೇಸ್ನ ಸಂಪೂರ್ಣ ಮಾಹಿತಿವುಳ್ಳ ಚಾರ್ಜ್ ಶೀಟ್ ಲಭ್ಯ!