ಬೆಂಗಳೂರು: ದೇಶದಲ್ಲೇ ಪ್ರಥಮ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಲಿದೆ. ಇಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ಹಿನ್ನೆಲೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮಾತುಕತೆ ನಡೆಸಿದರು. ಈ ತಿಂಗಳ 23 ರಿಂದಲೇ ಪದವಿ ಕಾಲೇಜುಗಳ ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಇದೇ ವೇಳೆ ಅವರು ಘೋಷಿಸಿದರು.
ಹೊಸದಾಗಿ ರೂಪಿಸಲಾಗಿರುವ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ದಾಖಲಾತಿ ಪ್ರಕ್ರಿಯೆ ಆರಂಭ ಮಾಡಲಾಗುವುದು. ಅದರ ಮಾದರಿಯನ್ನೂ ಉದ್ಘಾಟಿಸಲಾಗುವುದು ಎಂದು ಸಚಿವರು ಘೋಷಿಸಿದರು.
ಈ ಯೋಜನೆ ಅನುಷ್ಠಾನಕ್ಕೆ ಸರ್ಕಾರದಿಂದ ಮೂರು ಸಾವಿರ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಥಮ ವರ್ಷದಲ್ಲಿ ಒಂದು ಸಾವಿರ ಕೋಟಿಗೆ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದರು.
ಹತ್ತು ವರ್ಷಗಳಲ್ಲೇ ಜಾರಿ: ಶಿಕ್ಷಣ ನೀತಿ ಜಾರಿಗೆ ಕೇಂದ್ರ ಸರ್ಕಾರ 15 ವರ್ಷ ಕಾಲಾವಕಾಶ ನೀಡಿದೆ. ರಾಜ್ಯ ಸರ್ಕಾರ ಹತ್ತೇ ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ ಮಾಡುವುದಕ್ಕೆ ಆಗಸ್ಟ್ 7 ರಂದೇ ಆದೇಶ ಹೊರಡಿಸಲಾಗಿದೆ. ಅದರ ಮಾರ್ಗಸೂಚಿಯನ್ನೂ ಪ್ರಕಟಿಸಲಾಗಿದೆ ಎಂದರು. ಈ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಡ್ಡಾಯವಾಗಿ ಡಿಗ್ರಿ ಮೊದಲೆರಡು ವರ್ಷದಲ್ಲಿ ಕನ್ನಡ ಕಲಿಕೆ ಮಾಡಲೇಬೇಕಿದೆ ಎಂದರು.
ತಜ್ಞರ 32 ಸಮಿತಿಗಳ ರಚನೆ
2021-22ರಿಂದಲೇ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯವಾರು ಮಾದರಿ ಪಠ್ಯಕ್ರಮಗಳನ್ನು ಸಿದ್ಧಪಡಿಸಲು ವಿಷಯ ತಜ್ಞರ 32 ಸಮಿತಿಗಳನ್ನು ರಚಿಸಲಾಗಿದೆ. ಈ ಪ್ರಕಾರವಾಗಿ 3 ವರ್ಷದ ಪದವಿ ಪ್ಲಸ್ 2 ವರ್ಷದ ಸ್ನಾತಕೋತ್ತರ ಅಥವಾ 4 ವರ್ಷದ ಆನರ್ಸ್ ಪದವಿ ಹಾಗೂ 1 ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನದ ಬಗ್ಗೆ ವಿಷಯವಾರು ಮಾದರಿ ಪಠ್ಯ ತಯಾರಿಸುವಂತೆ ಆಯಾ ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಎಲ್ಲ ವಿಷಯವಾರು ಸಮಿತಿಗಳು ಸಲ್ಲಿಸುವ ವರದಿಗಳ ಆಧಾರದ ಆಯಾ ವಿಷಯದ ಪಠ್ಯ ರಚನೆಯಾಗಲಿದೆ. ಇದೇ ಅಗಸ್ಟ್ 31ರೊಳಗೆ ಪಠ್ಯ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಪ್ರಶ್ನೆ ಎತ್ತಿದವರಿಗೆ ಉತ್ತರ ಕೊಟ್ಟಿದ್ದೇವೆ
ಶಿಕ್ಷಣ ನೀತಿಯ ಬಗ್ಗೆ ಕೆಲವರು ಕೆಲ ಅನುಮಾನ, ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಎಲ್ಲಕ್ಕೂ ಈಗಾಗಲೇ ಉತ್ತರ ನೀಡಲಾಗಿದೆ. ಮತ್ತೆ ಬೇಕಿದ್ದರೂ ಸರ್ಕಾರ ಉತ್ತರ ನೀಡಲು ಸಿದ್ಧವಿದೆ. ಪ್ರಧಾನಿ ನರೇಂದ್ರ ಮೋದಿ ಅವರು 38 ವರ್ಷಗಳ ನಂತರ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸಂಕಲ್ಪ ಮಾಡಿದ್ದಾರೆ.
ಈ ನೀತಿಯನ್ನು ರೂಪಿಸುವ ಮುನ್ನ ಎಲ್ಲ ವಿವಿಗಳ ಉಪ ಕುಲಪತಿಗಳು, ವಿಷಯವಾರು ತಜ್ಞರು, ವಿಜ್ಞಾನಿಗಳು, ತಂತ್ರಜ್ಞರು, ಭಾಷಾ ತಜ್ಞರು ಸೇರಿ ಎಲ್ಲ ಕ್ಷೇತ್ರಗಳ ಮುಂಚೂಣಿ ವ್ಯಕ್ತಿಗಳ ಅಭಿಪ್ರಾಯ ಪಡೆಯಲಾಗಿದೆ. ಐದು ವರ್ಷಗಳ ಕಾಲ ಅಧ್ಯಯನ ನಡೆಸಿದ ಕರಡು ನಂತರ ಕೇಂದ್ರಕ್ಕೆ ಅಂತಿಮ ವರದಿ ಸಲ್ಲಿಸಲಾಯಿತು ಎಂದರು.
ಅನುಮಾನ, ಗೊಂದಲ ಬೇಡ: ಶೇ40ರಷ್ಟು ಡಿಜಿಟಲ್ ಕಲಿಕೆಗೂ ಅವಕಾಶ ಮಾಡಿಕೊಡಲಾಗುತ್ತದೆ. ಡಿಜಿಟಲ್ ಕಲಿಕೆ ಅನ್ನುವುದು ಕಡ್ಡಾಯವಲ್ಲ. ಅಗತ್ಯ ಇದ್ದವರು ಮಾತ್ರ ಪಡೆಯಬಹುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಈಗಾಗಲೇ ಉತ್ತರ ನೀಡಿದ್ದೇವೆ. ಅಗತ್ಯಬಿದ್ದರೆ, ಮತ್ತಷ್ಟು ವಿವರ ನೀಡಲಾಗುವುದು. ಇದರಲ್ಲಿ ಮುಚ್ಚುಮರೆ ಏನಿಲ್ಲ. ಅತ್ಯಂತ ಪಾರದರ್ಶಕವಾಗಿ, ರಾಷ್ಟ್ರದ ಹಿತದೃಷ್ಟಿಯಿಂದ ಜಾರಿಗೆ ಬರುತ್ತಿರುವುದು ಶಿಕ್ಷಣ ನೀತಿ. ಮುಖ್ಯವಾಗಿ ಕನ್ನಡದ ಕಲಿಕೆಯ ಬಗ್ಗೆ ಸಿದ್ದರಾಮಯ್ಯ ಹೇಳಿರುವ ಮಾತು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.
ಓದಿ: ಕಾಸ್ಟಿಂಗ್ ಸೋಡಾ ಮಿಕ್ಸ್ ಮಾಡುವ ವೇಳೆ ಸ್ಫೋಟ: ಚಿಕಿತ್ಸೆ ಪಡೆಯುತ್ತಿದ್ದ ಐವರಲ್ಲಿ ಓರ್ವ ಸಾವು