ಹುಬ್ಬಳ್ಳಿ: ಮಂಗಳೂರಿನ ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಸ್ಫೋಟಕ ವಸ್ತು ಪತ್ತೆ ಆಗಿದ್ದು, ಬಾಂಬ್ ಇರುವ ಸಂಶಯ ವ್ಯಕ್ತವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೊದಲ ಹಂತದ ತನಿಖೆಯಾಗುತ್ತಿದೆ. ಈ ರೀತಿ ಭಯ ಹುಟ್ಟಿಸುವ ಪ್ರಕ್ರಿಯೆ ಮೇಲಿಂದ ಮೇಲೆ ನಡೆಯುತ್ತಿವೆ. ಈ ರೀತಿಯ ಪ್ರಯತ್ನ ಹತ್ತಿಕ್ಕಲು ನಾವು ಕಟ್ಟೆಚ್ಚರ ವಹಿಸಿದ್ದೇವೆ ಎಂದರು.
ಮಂಗಳೂರು, ಬೆಂಗಳೂರು, ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಳನ್ನ ಇನ್ನಷ್ಟು ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ ಇದು ದೇಶದ್ರೋಹದ ಕೆಲಸ. ಈ ಪ್ರಕರಣವನ್ನು ಶೀಘ್ರದಲ್ಲೇ ಭೇದಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.