ಹುಬ್ಬಳ್ಳಿ : ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಜಣ್ಣ ಕೊರವಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಮತ್ತು ಮಾದಕ ವ್ಯಸನದ ವಿರುದ್ಧ ಕಳೆದ ಎರಡೂವರೆ ದಶಕಗಳಿಂದ ಜಾಗೃತಿ ಮತ್ತು ಮನಪರಿವರ್ತನಾ ಕಾರ್ಯಕ್ರಮ ಏರ್ಪಡಿಸುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಅವರ ಸ್ವಸ್ಥ ಸಮಾಜ ನಿರ್ಮಾಣದ ಆಶಯದೊಂದಿಗೆ ಜನ್ಮ ತಾಳಿದ ಸಂಸ್ಥೆಯಾಗಿದೆ. ಇದೀಗ ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಸಾಗಣೆ ಮತ್ತು ಪೂರೈಕೆ ಪ್ರಕರಣ ಹೆಚ್ಚಾಗುತ್ತಿವೆ. ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಪೂರೈಕೆಯಾಗುತ್ತಿರುವುದು ಕಳವಳಕಾರಿ ವಿಷಯ ಎಂದರು.
ಈ ಹಿನ್ನೆಲೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮಾದಕ ವಸ್ತುಗಳ ಬಳಕೆ ತಡೆಗಟ್ಟಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಧಾರವಾಡ ಪ್ರಾದೇಶಿಕ ಕಚೇರಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಧಾರವಾಡ ಜಿಲ್ಲೆ ನಿರ್ದೇಶಕ ಸುರೇಶ ಮೊವಲಿ, ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಫಿರೋಜಿ ಖಂಡೇಕರ್ ಹಾಗೂ ವೇದಿಕೆಯ ಇನ್ನಿತರ ಪದಾಧಿಕಾರಿಗಳು ಇದ್ದರು.