ಧಾರವಾಡ: ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಪ್ರದೇಶವನ್ನು ಅಭಿವೃದ್ಧಿಗೊಳಿಸಲು ಮತ್ತು ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ಪೂರೈಸಲು ಸರ್ಕಾರ ವಿವಿಧ ನಗರಾಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅಧಿಕಾರಿಗಳು ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಮತ್ತು ಕಾಮಗಾರಿಗಳನ್ನು ಕಳಪೆ ಗುಣಮಟ್ಟ, ಅವ್ಯವಹಾರ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದ ಕಾಮಗಾರಿಗಳು, ಸ್ಮಾರ್ಟ್ ಸಿಟಿಗೆ ಸಂಬಂಧಿಸಿದ ಕಾಮಗಾರಿಗಳು, ಜಲಮಂಡಳಿ ಮತ್ತು ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಮಹಾನಗರ ಪಾಲಿಕೆಗೆ ಬಿಡುಗಡೆಯಾದ ಅನುದಾನ, ಅನುಮೋದಿತ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ನಗರೋತ್ಥಾನ ಯೋಜನೆ, ಎಸ್‍ಎಫ್‍ಸಿ ಅನುದಾನ, 14ನೇ ಹಣಕಾಸು ಯೋಜನೆಯ ಅನುದಾನಗಳನ್ನು ಸಮರ್ಪಕವಾಗಿ ಬಳಸಿ ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಹುಬ್ಬಳ್ಳಿಗೆ 1,200 ಕೋಟಿ ವೆಚ್ಚದಲ್ಲಿ 24x7 ಕುಡಿಯುವ ನೀರು ಯೋಜನೆ ಸಿದ್ಧಗೊಂಡಿದೆ. ಆಡಳಿತಾತ್ಮಕ ಅನುಮೋದನೆ ಹಾಗೂ ಕಾಮಗಾರಿ ಆರಂಭಕ್ಕೆ ಸೂಚಿಸಿದರು. ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾರ್ಮಿಕರಿಗೆ ವಿತರಿಸಲು ಕ್ರಮಕೈಗೊಳ್ಳಬೇಕು. ಅಮೃತ ಯೋಜನೆ, ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಚಿವರು ತಿಳಿಸಿದರು.
ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸಹ ಮಾತನಾಡಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಕಾಮಗಾರಿಗಳ ಕುರಿತು ಆಯುಕ್ತ ಡಾ. ಸುರೇಶ್ ಇಟ್ನಾಳ್, ಜಲಮಂಡಳಿ ಕಾಮಗಾರಿಗಳ ಕುರಿತು ಮುಖ್ಯ ಅಭಿಯಂತರ ಜಿ ಎಂ ಮಾದೇಗೌಡ, ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಕುರಿತು ಪ್ರಧಾನ ವ್ಯವಸ್ಥಾಪಕ ಶಕೀಲ್ ಅಹ್ಮದ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಕುರಿತು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಗತಿ ವರದಿ ನೀಡಿದರು.
ಈ ವೇಳೆ ಶಾಸಕರುಗಳಾದ ಅರವಿಂದ ಬೆಲ್ಲದ್, ಅಮೃತ್ ದೇಸಾಯಿ, ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ರಾಜ್ಯ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಕಾವೇರಿ ಉಪಸ್ಥಿತರಿದ್ದರು.