ಹುಬ್ಬಳ್ಳಿ: ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳ ಸ್ಥಾಪನೆಯ ಬಹುನಿರೀಕ್ಷಿತ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ನಗರದ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ಪ್ರಾರಂಭವಾಯಿತು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ ಪ್ರಾಸ್ತಾವಿಕವಾಗಿ ಮಾತನಾಡಿ, ಹದಿನೈದು ವರ್ಷಗಳ ಹಿಂದೆ ಧಾರವಾಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ತಮಗೆ ಉತ್ತರ ಕರ್ನಾಟಕದ ಭೂಗೋಳಿಕ, ಸಾಮಾಜಿಕ, ಆರ್ಥಿಕ ಪರಿಚಯವಿದೆ. ಈ ಭಾಗದ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿದೆ. ಇನ್ವೆಸ್ಟ್ ಕರ್ನಾಟಕ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವುದು ಹೊಸ ಭರವಸೆ ಹುಟ್ಟಿಸಿದೆ ಎಂದರು.
ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಅವರು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಹುಬ್ಬಳ್ಳಿ ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಪರಿಚಯ ಮಾಡಿಕೊಟ್ಟರು. ಇದೇ ವೇಳೆ, ಬರುವ ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಇನ್ ವೆಸ್ಟ್ ಕರ್ನಾಟಕ ಸಮಾವೇಶ ನಡೆಯಲಿದೆ ಎಂಬ ಮಾಹಿತಿಯನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಎಲ್ಸಿಡಿ ಪರದೆಯ ಮೂಲಕ ಅಧಿಕೃತವಾಗಿ ಅನಾವರಣಗೊಳಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಕೈಗಾರಿಕೆ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.