ಧಾರವಾಡ: ಬೆಳಗಾವಿ ಜಿಲ್ಲೆಯ ಕೊಲ್ಲಾಪೂರ ಹೊರವಲಯದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಪೊಲೀಸರ ಸಮ್ಮುಖದಲ್ಲಿ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಇಂತಹ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಿವಸೇನೆ ಪುಂಡಾಟಿಕೆ ಗಡಿ ಭಾಗದಲ್ಲಿ ಹೆಚ್ಚಾಗಿದ್ದು, ಕೂಡಲೇ ಕರ್ನಾಟಕ ಸರ್ಕಾರ ಜಾಗೃತಿ ವಹಿಸಿ ಕನ್ನಡಿಗರ ಹಾಗೂ ಕನ್ನಡ ಭಾಷೆಯ ರಕ್ಷಣೆ ಮಾಡಲು ಮುಂದಾಗಬೇಕು. ಇಂತಹ ಘಟನೆಗಳು ಮರುಕಳಿಸಿದರೆ ಕನ್ನಡಿಗರು ಬೇರೊಂದು ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.