ಹುಬ್ಬಳ್ಳಿ: ಬಿಜೆಪಿ ಶಾಸಕ ಮುರುಗೇಶ ನಿರಾಣಿ ಅವರು ಮಿಡಿಯಾ ಗ್ರೂಪ್ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕಾರ್ಯ ಮಾಡಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನಗರದ ದುರ್ಗದ ಬೈಲ್ನಲ್ಲಿ ನಡೆದ ಪ್ರತಿಭಟನೆ ವೇಳೆ ಶಾಸಕ ಮುರಗೇಶ ನಿರಾಣಿ ಅವರ ಭಾವಚಿತ್ರವನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರ ಮಿಡಿಯಾ ಗ್ರೂಪ್ನಲ್ಲಿ ಇತ್ತೀಚೆಗೆ ಹಿಂದೂಗಳ ಪವಿತ್ರ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಹಿಂದೂ ಸಮಾಜದ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಿದ್ದು, ಖಂಡನೀಯ. ರಾಜ್ಯ ಸರ್ಕಾರ, ಗೃಹ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಮತ್ತು ಅವರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯ ಅಧ್ಯಕ್ಷರ ಆದೇಶದ ಮೇರೆಗೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತಿದೆ ಎಂದರು.
ಕೂಡಲೇ ರಾಜ್ಯ ಸರಕಾರ ಶಾಸಕ ಮುರಗೇಶ ನಿರಾಣಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸತ್ಯಾಗ್ರಹ ಹಾಗೂ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.