ಹುಬ್ಬಳ್ಳಿ: ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ನಿರಂತರ ಖರೀದಿ ಕೇಂದ್ರ ಸ್ಥಾಪಿಸುವುದು ವಿಳಂಬವಾದರೆ ರೈತ ಸೇನಾ ಕರ್ನಾಟಕ ಹೋರಾಟ ಸಮಿತಿಯಿಂದ ಕಾನೂನು ರೀತಿ ಹೋರಾಟ ನಡೆಸುವುದಾಗಿ ಕರ್ನಾಟಕ ರೈತ ಸೇನಾ ಅಧ್ಯಕ್ಷ ವಿರೇಶ್ ಸೊಬರದಮಠ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಈಗಾಗಲೇ ಹೋರಾಟ ನಡೆಸಿದ್ದೇವೆ. ಅಲ್ಲದೆ ಜಿಲ್ಲಾಧಿಕಾರಿ ಸೇರಿದಂತೆ ಉಪ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ್ದೇವೆ. ಜನವರಿ 27ರಂದು ಧಾರವಾಡ ಹಾಗೂ ಗದಗ ಜಿಲ್ಲಾ ರೈತರು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಕೊಡುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ ಜಿಲ್ಲಾಧಿಕಾರಿ ದೀಪಾ ಚೋಳನ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಧಾರವಾಡ ಎಪಿಎಂಸಿ, ಹೆಬ್ಬಳ್ಳಿ, ಉಪ್ಪಿನ ಬೇಟಗೇರಿ, ಹುಬ್ಬಳ್ಳಿ ಎಪಿಎಂಸಿ ಮುಖ್ಯ ಮಾರುಕಟ್ಟೆ, ನೂಲ್ವಿ, ಹೆಬಸೂರ, ಕುಂದಗೋಳ ಎಪಿಎಂಸಿ, ಯಲಿವಾಳ, ಯರಗುಪ್ಪಿ, ಅಣ್ಣಿಗೇರಿ, ನವಲಗುಂದ, ಮೊರಬ, ತಿರ್ಲಾಪೂರ ಸ್ಥಳದಲ್ಲಿ ಕಾಯಂ ಖರೀದಿ ಕೇಂದ್ರ ಸ್ಥಾಪನೆ ಮಾಡಬೇಕು ಎಂದು ವೀರೇಶ್ ಸೊಬರದಮಠ ಆಗ್ರಹಿಸಿದರು.