ಧಾರವಾಡ : ರಾಷ್ಟ್ರಧ್ವಜ ತಯಾರಿಸುವ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಿಕ್ಕಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಘ ಕಾರ್ಯ ನಿರ್ವಹಿಸುತ್ತಿದೆ.
ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿಗೆ ಬಾಜನವಾಗಿದ್ದು, ಅಕ್ಟೋಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ. ಐದು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿ ಇದಾಗಿದೆ. ವಿಶ್ರಾಂತ ನ್ಯಾಯಮೂರ್ತಿ ಬಿ ವೀರಪ್ಪ ಅಧ್ಯಕ್ಷತೆ ಸಮಿತಿಯಿಂದ ಪ್ರಶಸ್ತಿ ಆಯ್ಕೆಯಾಗಿದೆ.
ಸಂಘ ಐದು ದಶಕಗಳಿಂದ ರಾಷ್ಟ್ರಧ್ವಜ ತಯಾರಿಸುವ ಕೆಲಸ ಮಾಡಿಕೊಂಡು ಬರುತ್ತಿದೆ. ಈ ವರ್ಷದಿಂದ ಧ್ವಜ ತಯಾರಿಸುವ ಅನುಮತಿ ಸಹ ಪಡೆದುಕೊಂಡಿದೆ. 250 ನೂಲುವವರು, 50 ನೇಕಾರರು, 15 ಕಾಯಂ ಕಾರ್ಯಕರ್ತರು ಸಂಘದಲ್ಲಿ ಕೆಲಸ ಮಾಡುತ್ತಿದ್ದಾರೆ. 10 ಹಳ್ಳಿಗಳಲ್ಲಿ ತನ್ನ ಕಾರ್ಯಕ್ಷೇತ್ರ ಸೇವಾ ನಡೆಸುತ್ತಿದೆ.
ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ - ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಆಯ್ಕೆ : ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ 2020 ಮತ್ತು 2021 ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ (ಸೆ -30-2021) ಪ್ರಕಟಿಸಲಾಗಿತ್ತು.
ಕೊರೊನಾ ಹಿನ್ನೆಲೆ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ. ಈ ವರ್ಷ(2021) ಕೋವಿಡ್ ಪ್ರಕರಣ ಕಡಿಮೆಯಾಗಿದ್ದ ಹಿನ್ನೆಲೆ, ಸರ್ಕಾರವು ಈ ಪ್ರಶಸ್ತಿಗಳನ್ನು ಪ್ರಕಟಿಸಿತ್ತು. 2020ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಮತಿ ಮೀರಾಬಾಯಿ ಕೊಪ್ಪಿಕರ್ ಮತ್ತು 2021ನೇ ಸಾಲಿಗೆ ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅಶೋಕ್ ಬಂಗಾರೆಪ್ಪಾ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
ಇದನ್ನೂ ಓದಿ: ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ - ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಆಯ್ಕೆ