ಹುಬ್ಬಳ್ಳಿ: ಶೇ.40 ಕಮಿಷನ್ ಸರ್ಕಾರ ಎಂದು ಆರೋಪಿಸುವ ಕಾಂಗ್ರೆಸ್ ತಾಕತ್ ಇದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಸವಾಲು ಹಾಕಿದರು.
ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇದುವರೆಗೆ 40% ಕಮಿಷನ್ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಕೇವಲ ಗಾಳಿಯಲ್ಲಿ ಗುಂಡು ಹೊಡೆದಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳನ್ನು ಬಿಜೆಪಿ ಸರ್ಕಾರ ಹೊರಹಾಕಲಿದೆ. ಮೊದಲ ಹಂತದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಾಗಿದ್ದು, ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಬಿಜೆಪಿ ಆ ಕೆಲಸ ಮಾಡುತ್ತಿದೆ ಎಂದರು.
ಕಾಂಗ್ರೆಸ್ ಭಾರತ ಜೋಡೋ ಪಾದಯಾತ್ರೆ ಆರಂಭಿಸಿದ್ದರೆ ಅದೇ ಪಕ್ಷದ ಮುಖಂಡರು ಪಕ್ಷ ಬಿಡುವ ಮೂಲಕ ಕಾಂಗ್ರೆಸ್ ಚೋಡೋ ಅಭಿಯಾನವನ್ನು ಕೈಗೊಂಡಿದ್ದಾರೆ. ಈಗಾಗಲೇ ಗೋವಾದ 8 ಶಾಸಕರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಅದೇ ರಾಜ್ಯದಲ್ಲಿ ಹಲವು ಕಾಂಗ್ರೆಸ್ ನಾಯಕರು ಪಕ್ಷ ತೊರೆಯಲಿದ್ದಾರೆ ಎಂದು ಕುಟುಕಿದರು.
ಅ. 9 ರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ 52 ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಪ್ರವಾಸ ನಡೆಯಲಿದೆ. ಅದೇ ರೀತಿಯಲ್ಲಿ ಸೆಪ್ಟೆಂಬರ್ 27 ರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ನೇತೃತ್ವದಲ್ಲಿ ಪಕ್ಷ ಸಂಘಟನೆ ಪ್ರವಾಸ ನಡೆಯಲಿದೆ. ಪ್ರತಿ ಜಿಲ್ಲೆಯಲ್ಲಿ ಎರಡು ರಾಜಕೀಯ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು.
ದೇಶದ ಪ್ರಧಾನಿ ನರೇಂದ್ರ ಮೋದಿ ಪ್ರತಿ ತಿಂಗಳು ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿ, ಶಿವಮೊಗ್ಗ, ಕಲಬುರಗಿ, ಬೆಂಗಳೂರು, ಮೈಸೂರು, ಬಳ್ಳಾರಿಯಲ್ಲಿ ಬೃಹತ್ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಅದೇ ರೀತಿಯಾಗಿ ಪಕ್ಷದ ಸೇವಾ ಪಾಕ್ಷಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಮಹೇಶ ತೆಂಗಿನಕಾಯಿ ಮಾಹಿತಿ ನೀಡಿದರು.
ಇದನ್ನೂ ಓದಿ: ಬೆಂಗಳೂರು ನೆರೆಗೆ ಕಾರಣರಾದ ಮೂಲ ಪುರುಷರ ದಾಖಲೆ ಬಿಡುಗಡೆ ಮಾಡುತ್ತೇನೆ: ಸಚಿವ ಅಶೋಕ್