ಹುಬ್ಬಳ್ಳಿ: ಹಥ್ರಾಸ್ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಪೋಷಕರನ್ನು ಕೂಡಿಹಾಕಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿದ್ದಕ್ಕೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಹುಬ್ಬಳ್ಳಿಯಲ್ಲಿ ವಿವಿಧ ದಲಿತ ಸಂಘ ಸಂಸ್ಥೆಗಳ ಒಕ್ಕೂಟ ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಸ್ತೆ ಬಂದ್ ಮಾಡಿದ ಪ್ರತಿಭಟನಾಕಾರರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಪ್ರದೇಶ ಸರ್ಕಾರವನ್ನು ವಿಸರ್ಜನೆಗೊಳಿಸಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು. ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಈ ಪ್ರಕರಣವನ್ನು ಇತರೆ ರಾಜ್ಯದ ವಿಶೇಷ ತ್ವರಿತ ವಿಚಾರಣಾ ನ್ಯಾಯಾಲಯಕ್ಕೆ ನೀಡಬೇಕು. ಉತ್ತರ ಪ್ರದೇಶ ಸರ್ಕಾರವು ಸಂತ್ರಸ್ತೆ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.