ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೋಲಿಸರಿಂದ ಮಾಹಿತಿ ಪಡೆದಿದ್ದು, ಈ ಬಗ್ಗೆ ಗಂಭೀರ ತನಿಖೆ ನಡೆಸಲು ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಹನ್ನೊಂದನೇ ದಿನದ ಗಣೇಶ ವಿಸರ್ಜನೆ ವೇಳೆಯಲ್ಲಿ ಚಾಕು ಇರಿತಕ್ಕೆ ಒಳಗಾಗಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರಿಗೆ ಶೆಟ್ಟರ್ ಸಾಂತ್ವನ ಹೇಳಿದರು.
ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚಾಕು ಇರಿತಕ್ಕೆ ಒಳಗಾದವರಿಗೆ ವಿಶೇಷ ಚಿಕಿತ್ಸೆ ನೀಡುವಂತೆ ಕಿಮ್ಸ್ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಯಾರು ಹೆದರುವ ಅವಶ್ಯಕತೆ ಇಲ್ಲ. ಇನ್ನೂ ಪೋಲಿಸರು ಈಗಾಗಲೇ ಘಟನೆಗೆ ಕಾರಣರಾದ ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ವೈಯಕ್ತಿಕ ವಿಚಾರ ಕಾರಣವೆಂದು ತಿಳಿಸಿದ್ದಾರೆ. ಹಾಗಾಗಿ ಘಟನೆಗೆ ಬೇರೆ ಅರ್ಥಗಳನ್ನು ಕಲ್ಪಿಸುವುದು ಸರಿಯಲ್ಲ ಎಂದರು.
ಇದನ್ನೂ ಓದಿ: ಗಣೇಶ ನಿಮಜ್ಜನ ವೇಳೆ ನರ್ಸಿಂಗ್ ವಿದ್ಯಾರ್ಥಿಯ ಕೊಲೆ : ಆರೋಪಿಗಳ ಬಂಧನ
ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ:
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯಕ್ಷೇಮ ವಿಚಾರಿಸಿದ್ರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಗಣೇಶ ವಿಸರ್ಜನೆ ವೇಳೆ 9 ಜನರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿತ್ತು. ಆದ್ರೆ, ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ನಾನು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಭರವಸೆ ಕೊಟ್ಟರು.