ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ನಿರ್ಣಯಗಳಲ್ಲಿಯೇ ಭಿನ್ನಾಭಿಪ್ರಾಯಗಳು ಇದ್ದು, ಕಾಂಗ್ರೆಸ್ ಪಕ್ಷ ಒಡೆದ ಮನೆಯಂತಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ದೂರಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಿ.ಎಂ. ಸ್ಥಾನಕ್ಕಾಗಿ ಈಗಲೇ ಕಿತ್ತಾಟ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಭವಿಷ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಹೇಳುತ್ತಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ಅದು ಒಡೆದ ಮನೆಯಂತಾಗಿದೆ. ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಕಿತ್ತಾಟ ಶುರುವಾಗಿದೆ ಎಂದು ಶೆಟ್ಟರ್ ಲೇವಡಿ ಮಾಡಿದರು.
ಇದೇ ಸಂದರ್ಭದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ವಿ.ಎಸ್.ಸಂಕನೂರ ಅವರ ಗೆಲುವು ನಿಶ್ಚಿತ. ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಸಂಚರಿಸಿ ಗಮನಿಸಿದ್ದು ಸಂಕನೂರ ಅವರು ಗೆಲುವು ಸಾಧಿಸಲಿದ್ದಾರೆ ಎಂದರು.
ಶಾಸಕ ಬಸವರಾಜ ಯತ್ನಾಳ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸದ್ಯ ನಾನು ಏನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.