ಹುಬ್ಬಳ್ಳಿ : ಪಾಲಿಕೆ ಅಧಿಕಾರಿಗಳು ಹೆಚ್ಚು ಜನ ಸೇರಿದರೆ ದಾಳಿ ನಡೆಸಿ ದಂಡ ವಸೂಲಿ ಮಾಡುತ್ತಾರೆ ವಿನಃ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೇಸರ ವ್ಯಕ್ತಪಡಿಸಿದರು.
ನಗರದ ಇಂದಿರ ಗಾಜಿನ ಮನೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೋವಿಡ್ ಗೈಡ್ಲೈನ್ಸ್ಗಳನ್ನೇ ಬಂಡವಾಳ ಮಾಡಿಕೊಂಡ ಪಾಲಿಕೆ ಮತ್ತು ಪೊಲೀಸ್ ಸಿಬ್ಬಂದಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ, ಪಾಲಿಕೆ ಆಯುಕ್ತರು, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿಗಳು ಮುಂದೆಯೇ ಹೇಳಿದರು.
ಜಾಗೃತಿ ಮೂಡಿಸುವ ಉದ್ದೇಶದಿಂದ ದಂಡ ಅಥವಾ ಎಫ್‌ಐಆರ್ ದಾಖಲಿಸಲಿ. ಕೋವಿಡ್ ಹೆಸರಲ್ಲಿ ಸುಲಿಗೆಗೆ ಅವಕಾಶ ನೀಡಬೇಡಿ. ಹಣ ನೀಡಿದರೆ ಬಿಡುತ್ತೇವೆ ಇಲ್ಲವಾದರೆ ಎಫ್‌ಐಆರ್ ದಾಖಲಿಸುವುದಾಗಿ ಧಮ್ಕಿ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಿ ಎಂದು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.