ಧಾರವಾಡ : ಅಲ್ಪಸಂಖ್ಯಾತರನ್ನು ಮುಖ್ಯ ವಾಹಿನಿಗೆ ತರಲು ವೃತ್ತಿ ಶಿಕ್ಷಣ ನೀಡಲು ಚಿಂತನೆ ನಡೆದಿದೆ. ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ಒಂದರಂತೆ 4 ಪಾಲಿಟೆಕ್ನಿಕ್‍ಗಳನ್ನು ಈ ಉದ್ದೇಶಕ್ಕಾಗಿ ಪ್ರಾರಂಭಿಸಲಾಗುವುದು ಎಂದು ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಬಾಳಾಸಾಹೇಬ್ ಪಾಟೀಲ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಇಲಾಖೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನು ಶಿಕ್ಷಣದ ಮೂಲಕವೇ ಸಮಾಜದ ಮುಖ್ಯ ವಾಹಿನಿಗೆ ತರಬೇಕು. ಈ ನಿಟ್ಟಿನಲ್ಲಿ ಮದರಸಾಗಳ ಶಿಕ್ಷಣ ಪದ್ಧತಿಯೊಂದಿಗೆ ಇತರ ನಿಗದಿತ ಪಠ್ಯ ಕ್ರಮಗಳನ್ನು ವಯಸ್ಸಿಗನುಗುಣವಾಗಿ ಬೋಧಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯು ಅಗತ್ಯ ಕಾರ್ಯಕ್ರಮ ರೂಪಿಸಬೇಕು ಎಂದರು.
ರಾಜ್ಯದ ಕೈಮಗ್ಗ ಹಾಗೂ ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ಬದುಕಿಗೆ ಆರ್ಥಿಕ ನೆರವು ನೀಡಲು ನೇಕಾರ ಸಮ್ಮಾನ್ ಯೋಜನೆಯಡಿ ಪ್ರತಿ ನೇಕಾರ ಕುಟುಂಬಕ್ಕೆ ವಾರ್ಷಿಕ ತಲಾ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು ಎಂದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ್ ಪಠಾಣ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕ ಮೆಹಬೂಬ್ ಸೇರಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕೆಆರ್‍ಐಡಿಸಿಎಲ್ ಇಂಜಿನಿಯರುಗಳು, ವಕ್ಫ್ ಅಧಿಕಾರಿಗಳು, ಅಲ್ಪಸಂಖ್ಯಾತರ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿದ್ದರು.