ಹುಬ್ಬಳ್ಳಿ:ನೆರೆ ಸಂತ್ರಸ್ತರಿಗೆ ಪರಿಹಾರ ಸಾಲದಿದ್ದಲ್ಲಿ ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚಿನ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹುಬ್ಬಳ್ಳಿಯಲ್ಲಿ ತಿಳಿಸಿದರು.
ತಮ್ಮ ಇಲಾಖೆ ವ್ಯಾಪ್ತಿಯ ಅಂಧಮಕ್ಕಳ ಶಾಲೆಯ ಉದ್ಘಾಟನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಸಚಿವೆ ಶಶಿಕಲಾ ಜೊಲ್ಲೆ ಅವರು ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ್ರು. ಈಗಾಗಲೇ ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಒಂದು ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಸಮೀಕ್ಷೆಯಂತೆ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ನೆರೆ ಸಂತ್ರಸ್ತರ ಪರಿಹಾರ ವಿಳಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನೋಡಿಕೊಳ್ಳುವುದಕ್ಕೆ ಪಕ್ಷದಲ್ಲಿ ಹಿರಿಯರು ಕ್ರೀಯಾಶೀಲರಾಗಿದ್ದಾರೆ ಎಂದು ಚುಟುಕಾಗಿ ಉತ್ತರಿಸಿದರು. ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜೊಲ್ಲೆ, ಈ ವಿಷಯದ ಬಗ್ಗೆ ನ್ಯಾಯಾಲಯದಿಂದ ಏನು ಉತ್ತರ ಬರಲಿದೆ ಎಂದು ಕಾದು ನೋಡೋಣ. ಇದರ ಬಗ್ಗೆ ಏನೂ ಹೇಳಲು ಆಗುವುದಿಲ್ಲ ಎಂದರು. ಇನ್ನು, ಇಡಿ ವಿಚಾರಣೆ ಕುರಿತು ಪ್ರತಿಕ್ರಿಯಿಸಿದ ಅವರು ನನಗೆ ಈ ವಿಷಯದ ಬಗ್ಗೆ ಏನೂ ಗೊತ್ತಿಲ್ಲ. ನಾನು ಇದರ ಬಗ್ಗೆ ಏನನ್ನೂ ಮಾತನಾಡುವುದಿಲ್ಲ ಎಂದರು.