ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಆರು ಮಂದಿ ವಿರುದ್ದ ಎಫ್ಐಆರ್ ದಾಖಲಿಸಿದೆ.
ಆರೋಪಿಗಳಾದ ಬಸವರಾಜ್ , ವಿಕ್ರಂ, ಕೀರ್ತಿ ಕುಮಾರ್, ಸಂದೀಪ್, ಮಹಾಬಲ್ಲೇಶ್ವರ್ ಎಂಬುವವರ ಮೇಲೆ ಪ್ರಥಮ ವರ್ತಮಾನ ವರದಿ (ಎಫ್ಐಆರ್ ) ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದೆ. ಸೆ.6ರಂದು ನಡೆದ ಸಚಿವ ಸಂಪುಟದಲ್ಲಿ ಯೊಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ವಹಿಸಲು ಅನುಮತಿ ದೊರೆತಿತ್ತು. ನಂತರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ್ದರು.
ಏನಿದು ಹತ್ಯೆ ಪ್ರಕರಣ?: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ಗೌಡ ಅವರನ್ನು 2016 ಜೂ.15ರಂದು ಸಪ್ತಾಪುರದ ಉದಯ್ ಜಿಮ್ ಬಳಿ ಪೇಪರ್ ಓದುತ್ತಿರುವಾಗ ಏಕಾಏಕಿ ದಾಳಿ ನಡೆಸಿದ ನಾಲ್ವರು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿಬಂದಿತ್ತು. ಈ ಸಂಬಂಧ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಸದ್ಯ ಬಂಧಿಸಿದ್ದ ಆರು ಮಂದಿ ಆರೋಪಿಗಳಿಗೂ ಜಾಮೀನು ಸಿಕ್ಕಿದೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಕರೆಸಿ ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.