ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ಸಿಬಿಐ ಕಸ್ಟಡಿಗೆ ನೀಡುವ ಕುರಿತ ಅರ್ಜಿ ವಿಚಾರಣೆ ನಡೆಸಿದ ಧಾರವಾಡದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ನಿನ್ನೆ ಬಂಧಿಸಲಾಗಿದೆ. ಇಂದು ಸಿಬಿಐ ಮೂರು ದಿನ ಕಸ್ಟಡಿಗೆ ನೀಡುವಂತೆ ಧಾರವಾಡದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ವಿನಯ ಕುಲಕರ್ಣಿ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಧೀಶರು ಮಧ್ಯಾಹ್ನಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ.
ನಿನ್ನೆ ಮಧ್ಯಾಹ್ನ 3 ಗಂಟೆಗೆ ಸಿಬಿಐ ಪೊಲೀಸರು ವಿನಯ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಐಪಿಸಿ ಸೆಕ್ಷನ್ 302,143,147,148,120B ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ. ವಿನಯ ಕುಲಕರ್ಣಿ ಪರವಾಗಿ ವಕೀಲರಾದ ಬಾಹುಬಲಿ ಧನವಾಡೆ ವಾದ ಮಂಡನೆ ಮಾಡಿದ್ದು, ಸಿಬಿಐ ಪರವಾಗಿ ವಕೀಲರಾದ ಸುದರ್ಶನ ವಾದ ಮಂಡನೆ ಮಾಡಿದ್ದಾರೆ.