ಹುಬ್ಬಳ್ಳಿ: ಈಗಾಗಲೇ ಜನ ಕಾಂಗ್ರೆಸ್ ಪಕ್ಷವನ್ನು ಗೋ ಬ್ಯಾಕ್ ಮಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಬಿಜೆಪಿ ಮುಖಂಡರನ್ನ ಗೋಬ್ಯಾಕ್ ಎನ್ನುವ ನೈತಿಕ ಹಕ್ಕು ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೋ ಬ್ಯಾಕ್ ಅಮಿತ್ ಶಾ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಗೋ ಬ್ಯಾಕ್ ಮಾಡಿದ್ದಾರೆ ಎಂದು ಲೇವಡಿ ಮಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 18 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಸಿಎಎ ಹಾಗೂ ಎನ್ಆರ್ಸಿ ಕುರಿತು ಜಾಗೃತಿ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರಲ್ಲಿರುವ ತಪ್ಪು ಕಲ್ಪನೆ ದೂರ ಮಾಡಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಸಿಎಎ ಹಾಗೂ ಎನ್ಆರ್ಸಿ ಕುರಿತು ತಪ್ಪು ಮಾಹಿತಿ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಕೈ ನಾಯಕರಿಗೆ ಬಿಜೆಪಿ ಕುರಿತು ಆರೋಪ ಮಾಡಲು ವಿಷಯಗಳಿಲ್ಲ. ಈ ಹಿನ್ನೆಲೆಯಲ್ಲಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಸಚಿವ ಸಂಪುಟ ರಚನೆ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ವೈ ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿದ್ದಾರೆ. ಆ ವಿಚಾರ ಅವರಿಗೆ ಬಿಟ್ಟದ್ದು, ಅವರ ಹೇಳಿಕೆಯೇ ನಮ್ಮ ಹೇಳಿಕೆ ಎಂದರು.
ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ತಾಳ, ತಮಟೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಸುಳ್ಳು ಹೇಳಿಕೆಗಳನ್ನ ನೀಡುವುದರಲ್ಲಿ ನಿಸ್ಸೀಮರು. ಜನರು ಅವರ ಕೈಯಲ್ಲಿದ್ದ ತಾಳ, ತಮಟೆಗಳನ್ನು ಕಸಿದುಕೊಂಡು ಮನೆಗೆ ಕಳಿಸಿದ್ದಾರೆ. ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುವುದನ್ನ ಬಿಡಬೇಕು ಎಂದು ತಿರುಗೇಟು ನೀಡಿದ್ದಾರೆ.