ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆಯಿಂದ ನಗರದ ಅಕ್ಕಿಹೊಂಡದಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೆರೆಪೀಡಿತ ಪ್ರದೇಶದ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಮಾಡಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಹಾವಳಿಯಿಂದಾಗಿ ಉತ್ತರ ಕರ್ನಾಟಕಕ್ಕೆ ಅಪಾರ ಪ್ರಮಾಣದ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳ ಕಲಿಕಾ ಜೀವನದ ಮೇಲೆಯೂ ಬರೆ ಎಳೆದಂತಾಗಿದೆ. ಮಳೆಯಿಂದಾಗಿ ಮನೆ ಕುಸಿದು ವಿದ್ಯಾರ್ಥಿಗಳ ನೋಟ್ ಬುಕ್ ಹಾಗೂ ಪಠ್ಯಪುಸ್ತಕಗಳಿಗೆ ಹಾನಿಯಾಗಿದ್ದು, ಇದರಿಂದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಕಲಿಕೆಯಿಂದ ನಿರಾಶಾದಾಯಕ ಮನೋಭಾವನೆ ಮೈಗೂಡಿಸಿಕೊಳ್ಳಬಾರದು. ಈ ಹಿನ್ನೆಲೆಯಲ್ಲಿ ಸೇವಾ ಸಂಸ್ಥೆಯ ವತಿಯಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾದ ಉತ್ಪನ್ನವಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ಮನೆಯಿಂದಲೇ ವಿರೋಧಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಹಾಗೂ ಸ್ವಚ್ಛ ಭಾರತ ಯೋಜನೆಯ ಕನಸನ್ನು ನನಸು ಮಾಡಬೇಕೆಂದು ಮಕ್ಕಳಿಗೆ ಹಾಗೂ ಶಾಲಾ ಸಿಬ್ಬಂದಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಶಿವು ಮೆಣಸಿನಕಾಯಿ, ಡಿ.ಕೆ.ಚವ್ಹಾಣ, ಶ್ರೀಶೈಲ ಕರಿಕಟ್ಟಿ, ಎಂ.ಎಸ್.ಶಿವಳ್ಳಿಮಠ, ಮಹೇಶ ಟೆಂಗಿನಕಾಯಿ, ಸುಧೀರ್ ಸರಾಫ್ ಸೇರಿದಂತೆ ಇತರರು ಭಾಗಿಯಾಗಿದ್ದರು.