ಹುಬ್ಬಳ್ಳಿ: ಬಸ್ ಸಂಚಾರ ಪುನರಾರಂಭಿಸಲು ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿರುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಭಾಗದಲ್ಲಿ 2166 ಸಿಬ್ಬಂದಿಯಿದ್ದು ಎಲ್ಲರಿಗೂ ಕರ್ತವ್ಯಕ್ಕೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ. ಈಗಾಗಲೇ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಮತ್ತು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಒಂದೇ ಪ್ರವೇಶ ಹಾಗೂ ಒಂದೇ ನಿರ್ಗಮನ ವ್ಯವಸ್ಥೆ ಮಾಡಲಾಗಿದೆ.
ಇನ್ನು ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್, ಸ್ಯಾನಿಟೈಸರ್, ಮಾಸ್ಕ್ ಧರಿಸಿರುವ ಬಗ್ಗೆ ಪರಿಶೀಲನೆ ಮಾಡಲು ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಈ ಎಲ್ಲಾ ಪ್ರಕ್ರಿಯೆಗಳ ಸುಗಮ ನಿರ್ವಹಣೆಗಾಗಿ ಮೂರು ಪಾಳಿಯಲ್ಲಿ ಸಿಬ್ಬಂದಿ ಮತ್ತು ಮೇಲ್ವಿಚಾರಣೆಗಾಗಿ ಪ್ರತಿ ಬಸ್ ನಿಲ್ದಾಣಕ್ಕೂ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.
ಇನ್ನು ಸರ್ಕಾರದ ನಿರ್ದೇಶನಗಳು ಬಂದ ನಂತರ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಯಾವ ಮಾದರಿಯ ಬಸ್ಸುಗಳನ್ನು ಕಾರ್ಯಾಚರಣೆ ಮಾಡಬೇಕು ಮತ್ತು ಯಾವ ಮಾರ್ಗಗಳಲ್ಲಿ ಎಷ್ಟು ಬಸ್ಸುಗಳನ್ನು ರಸ್ತೆಗಿಳಿಸಬೇಕು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ್ ತಿಳಿಸಿದ್ದಾರೆ.