ಧಾರವಾಡ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 107 ಪರೀಕ್ಷಾ ಕೇಂದ್ರಗಳಿವೆ. ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಪ್ರತೀ ಕೇಂದ್ರಕ್ಕೂ ಓರ್ವ ಮುಖ್ಯ ಅಧೀಕ್ಷಕರನ್ನು ನಿಯೋಜನೆ ಮಾಡಲಾಗಿದೆ ಎಂದರು.
ಪ್ರತೀ ಕೇಂದ್ರಕ್ಕೂ ಓರ್ವ ಮೊಬೈಲ್ ಸ್ವಾಧೀನಾಧಿಕಾರಿ ನೇಮಕ ಮಾಡಿದ್ದು, ಒಟ್ಟು 90 ಕಸ್ಟೋಡಿಯನ್ ಮಾಡಲಾಗಿದೆ. ಸ್ಕೌಟ್ಸ್ ಮತ್ತು ಗೈಡ್ಸ್ನಿಂದ 180 ಸ್ವಯಂ ಸೇವಕರು, 180 ಜನ ಪ್ಯಾರಾ ಮೆಡಿಕಲ್ ಸಿಬ್ಬಂದಿ ಕೆಲಸ ಮಾಡಲಿದ್ದಾರೆ ಎಂದರು.
ಪರೀಕ್ಷೆಗೆ ಆಗಮಿಸುವ ಎಲ್ಲಾ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸಲು ವ್ಯವಸ್ಥೆ ಮಾಡಲಾಗಿದೆ. ಒಟ್ಟು 184 ಥರ್ಮಲ್ ಸ್ಕ್ಯಾನರ್ ಯಂತ್ರಗಳ ಮೂಲಕ ಪರೀಕ್ಷೆ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ 27 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 6 ಅಡಿ ಡೆಸ್ಕ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. 3 ಅಡಿಯ ಡೆಸ್ಕ್‌ನಲ್ಲಿ ಓರ್ವ ವಿದ್ಯಾರ್ಥಿಯನ್ನು ಕೂರಿಸಲಾಗುವುದು. ಒಟ್ಟು ಕೇಂದ್ರಗಳ ಪೈಕಿ 46 ನಗರ ಹಾಗೂ 44 ಗ್ರಾಮೀಣ ಪ್ರದೇಶದಲ್ಲಿವೆ. ಈಗಾಗಲೇ ಎಲ್ಲಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದರು.
ಅಲ್ಲದೆ ಪರೀಕ್ಷೆಗೂ ಮೂರು ದಿನ ಮುಂಚೆ ಸ್ಯಾನಿಟೈಸ್ ಕೆಲಸ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 18-20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.