ಧಾರವಾಡ: ಕೊರೊನಾ ಕುರಿತು ಜಾಗೃತಿ ಮೂಡಿಸಲು ಗ್ರಾಮೀಣ ಭಾಗ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ, ಜನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಆದ್ಯತೆ ನೀಡಿ ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ. ರವಿಕುಮಾರ ಸುರಪುರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೊನಾ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು, ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದರು.
ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್-19 ನಿಯಂತ್ರಿಸಲು ಜಿಲ್ಲಾಡಳಿತದ ನೇತೃತ್ವದಲ್ಲಿ, ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ಮಾಡುತ್ತಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆ ಹಾಗೂ ಜಾಗೃತಿ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದರು.
ಇನ್ನು ಸಾಮಾಜಿಕವಾಗಿ ಕೊರೊನಾ ಹರಡದಂತೆ ಕ್ರಮ ವಹಿಸಲು ಗ್ರಾಮೀಣ ಪ್ರದೇಶ, ಮಾರುಕಟ್ಟೆ, ಬಸ್ ನಿಲ್ದಾಣ, ಜಾತ್ರೆ, ಸಂತೆ, ದೇವಸ್ಥಾನ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲು ತಿಳಿಸಿದರು. ಪೊಲೀಸ್, ಆರೋಗ್ಯ, ಪಂಚಾಯತ ರಾಜ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ, ಕೊರೊನಾ ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಹೇಳಿದರು.
ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ, ಅನೇಕ ಸಮಸ್ಯೆಗಳು ಉಂಟಾಗುತ್ತಿವೆ. ಸಾರ್ವಜನಿಕರಿಗೆ ಉತ್ತಮ ಆರೋಗ್ಯದ ಬಗ್ಗೆ ಮನವರಿಕೆ ಮಾಡಬೇಕು. ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಮತ್ತು ಹರಡದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಬೇಕೆಂದು ಸೂಚಿಸಿದರು.
ಇನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ತಂಡಗಳನ್ನು ರಚಿಸಿ, ಮೇಲುಸ್ತುವಾರಿ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆ ಹಾಗೂ ಸರ್ಕಾರೇತರ ಸಂಘ, ಸಂಸ್ಥೆಗಳೊಂದಿಗೆ ಸಂಪರ್ಕ ಸಾಧಿಸಿ ಕೊರೊನಾ ಹರಡದಂತೆ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆ ರೂಪಿಸಿ, ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ. ಬಿ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.