ಧಾರವಾಡ: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ವೇಳೆ ವೀರ ಸಾವರ್ಕರ್ ಫೋಟೊ ಸುಟ್ಟಿರುವುದನ್ನು ಖಂಡಿಸಿ ಧಾರವಾಡದ ಉಪನಗರ ಪೊಲೀಸ್ ಠಾಣೆ ಮುಂಭಾಗದ ಬೆಳಗಾವಿ ರಸ್ತೆ ಬಂದ್ ಮಾಡಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೂರು ದಾಖಲಾಗುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಬಿಜೆಪಿ ಕಾರ್ಯಕರ್ತರಿಂದ ಕೊಡಗಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಖಂಡಿಸಿ ಶುಕ್ರವಾರ ಮಧ್ಯಾಹ್ನ ಧಾರವಾಡದಲ್ಲಿ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಪ್ರತಿಕೃತಿ ದಹಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂಬುದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಗ್ರಹವಾಗಿದೆ.
ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಅವರು ಆಗಮಿಸಿದ್ದು, ಪ್ರತಿಭಟನೆ ಕೈ ಬಿಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಆದರೆ, ಕಾರ್ಯಕರ್ತರು ಪಟ್ಟುಬಿಡದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಕಾಂಗ್ರೆಸ್ ನಾಯಕರ ಪ್ರತಿಭಟನೆ