ಧಾರವಾಡ : ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದ 2,200 ಗ್ರೂಪ್ ಡಿ ಹುದ್ದೆಯ ನೇಮಕ ಆಯ್ಕೆಪಟ್ಟಿ ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.
2018ರಲ್ಲಿ ನಡೆದ ನೈಋತ್ಯ ರೈಲ್ವೆ ವಲಯದ ಗ್ರೂಫ್ ಡಿ ಹುದ್ದೆಗಳ ನೇಮಕದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಿರುವ ನೈಋತ್ಯ ರೈಲ್ವೆ ವಲಯದ ಕನ್ನಡ ದ್ರೋಹದ ನಿಯಮಗಳನ್ನು ಕರ್ನಾಟಕ ನವ ನಿರ್ಮಾಣ ಸೇನೆ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದರು. ಈ ನೇಮಕದಲ್ಲಿ ಕನ್ನಡಿಗರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಇಲಾಖೆ ತಕ್ಷಣ ಮುಂದಾಗಬೇಕು. ಆಯ್ಕೆಯಾಗಿರುವ ಪಟ್ಟಿಯನ್ನು ಕೂಡಲೇ ರದ್ದುಪಡಿಸಿ ಸ್ಥಳೀಯ ಮಟ್ಟದಲ್ಲಿ ಮರು ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ನವ ನಿರ್ಮಾಣ ಸೇನೆ ಒತ್ತಾಯಿಸಿದೆ.