ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ವಿರೋಧಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಹಾಗೂ ಇತರೆ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿಂದು ಹುಬ್ಬಳ್ಳಿಯಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.
ಪ್ರತಿಭಟನಾ ಮೆರವಣಿಗೆ ನಡೆಯುವ ಮಾರ್ಗದ ಉದ್ದಕ್ಕೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದಿಂದ ಲ್ಯಾಮಿಂಗ್ಟನ್ ರೋಡ್ ಸೇರಿದಂತೆ ತಹಶಿಲ್ದಾರ್ರ ಕಚೇರಿಯವರೆಗೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಬೆಳಗ್ಗೆಯಿಂದಲೇ ಪೊಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಈ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಸ್ವಾತಂತ್ರ್ಯವಿದ್ದು, ಅಂಜುಮನ್ ಸಂಸ್ಥೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ ನೀಡಲಾಗಿದೆ. ಎಲ್ಲರೂ ಶಾಂತಿಯುತವಾಗಿ ನಡೆದುಕೊಳ್ಳಬೇಕು ಎಂದು ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೊಲೀಸ್ ಬಿಗಿಬಂದೋಬಸ್ತ್ ಆಯೋಜಿಸಲಾಗಿದೆ. ಸಿ.ಆರ್.ಪಿ.ಎಫ್, ಡಿ.ಎ.ಆರ್ ಸೇರಿದಂತೆ ಪೊಲೀಸ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಅಂಜುಮನ್ ಸಂಸ್ಥೆಯು ಸಭಾ ಕಾರ್ಯಕ್ರಮದ ಜವಾಬ್ದಾರಿ ಹೊತ್ತುಕೊಂಡಿದ್ದು, ಯಾರಾದರೂ ಕಾನೂನು ಬಾಹಿರವಾಗಿ ವರ್ತಿಸಿದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.