ಧಾರವಾಡ: 2019-20 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಡಿತಗೊಳಿಸುತ್ತಿರುವ ರಾಜ್ಯ ಸರ್ಕಾರದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ನಿಂದ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜುಬಲಿ ವೃತ್ತ, ಕೋರ್ಟ್ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಉದ್ದಕ್ಕೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಡ ವಿದ್ಯಾರ್ಥಿಗಳಿಗೆ ಬರುವ ವಿದ್ಯಾರ್ಥಿ ವೇತನದ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟಿದೆ ಎಂದು ಅಸಮಾಧಾನ ಹೊರಹಾಕಿದರು. ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2019-20 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ನೀಡಿದೆ.
ಈ ನೂತನ ಆದೇಶದಿಂದ ಅನುದಾನ ಕೊರತೆಯ ನೆಪವೊಡ್ಡಿ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳನ್ನು ವಂಚಿಸುತ್ತಿದೆ ಎಂದು ಆರೋಪಿಸಿದ್ದಾರೆ.