ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶ್ರೀ ಜಗದ್ಗುರು ಸಿದ್ದಾರೂಢರ ಹೆಸರಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿಮಾನಯಾನ ಖಾತೆ ಸಚಿವರು ತ್ವರಿತವಾಗಿ ಈ ಬಗ್ಗೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಸಿದ್ಧಾರೂಢರ ಹೆಸರಿಡುವ ವಿಚಾರ ಸಾಕಷ್ಟು ವಿಳಂಬವಾಗಿದೆ. ಆದ್ದರಿಂದ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ವಿಮಾನ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢರ ಹೆಸರಿಡಬೇಕೆಂದು ಭಜನೆ ಮಾಡುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.
ನಂತರ ರ್ಯಾಲಿ ಮೂಲಕ ತಹಶೀಲ್ದಾರರ ಕಚೇರಿ ತಲುಪಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಸಾಥ್ ನೀಡಿದರು.