ಹುಬ್ಬಳ್ಳಿ: ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು, ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಹಲವಾರು ಕುಟುಂಬಗಳು ಮನೆ ಕಳೆದುಕೊಂಡಿದ್ದು, ಜೀವನ ಅಸ್ತವ್ಯಸ್ತವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಕಾಳಜಿ ತೋರಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಪರಿಹಾರ ನೀಡದೆ ಮಲತಾಯಿ ಧೋರಣೆ ತೋರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಹಾಗೂ ರಾಜ್ಯ ಸರಕಾರ ಉತ್ತರ ಕರ್ನಾಟಕದ ಜನತೆಗೆ ಸ್ಪಂದನೆ ಮಾಡುವಲ್ಲಿ ವಿಫಲವಾಗಿದೆ. ಒಟ್ಟು 45,000 ಕೋಟಿ ರೂ ಅತಿವೃಷ್ಠಿಯಿಂದ ನಷ್ಟವಾಗಿದೆ. ಸರ್ಕಾರ ಕಾಟಚಾರಕ್ಕೆ ಪ್ರತೀ ಕುಟುಂಬಕ್ಕೆ ಕೇವಲ 10,000 ರೂ. ನೀಡಿದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಉತ್ತರ ಕರ್ನಾಟಕದ ಜನರ ಕಷ್ಟಕ್ಕೆ ಸ್ಪಂದಿಸಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.