ಹುಬ್ಬಳ್ಳಿ: ರೈಲು ಹಳಿ ಮೇಲೆ ಗುಡ್ಡ ಕುಸಿದು ಗೋವಾಕ್ಕೆ ರೈಲು ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಯೊಂದಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಹಾಮಳೆಗೆ ದೂಧ್ ಸಾಗರ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದ ಪರಿಣಾಮ ವಾಸ್ಕೊದಿಂದ ಮಡಗಾಂವ, ದೂಧ್ ಸಾಗರ, ಕ್ಯಾಸಲ್ ರಾಕ್, ಲೋಂಡಾ, ಧಾರವಾಡ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುವ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೋವಾಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಬೆಳಗ್ಗೆಯಿಂದಲೇ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಈ ಬಸ್ಗಳು ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಘಾಟ್ ಮಾರ್ಗವಾಗಿ ಸಂಚರಿಸುತ್ತವೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.
ಗೋವಾ ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರು 72 ಗಂಟೆಗಳ ಮುಂಚಿತವಾಗಿ ಪಡೆದಿರುವ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ. ಪರೀಕ್ಷೆ ಮಾಡಿಸಿಕೊಳ್ಳದೆ ತೆರಳುವವರು ಗೋವಾ ರಾಜ್ಯದ ಗಡಿಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅದಕ್ಕೆ ರೂ. 270 ಶುಲ್ಕ ಪಾವತಿಸಬೇಕು. ಆದ್ದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಉಚಿತ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಗೋವಾಕ್ಕೆ ಹೋಗುವ ಪ್ರಯಾಣಿಕರು ಗೋಕುಲ ರಸ್ತೆ ಬಸ್ ನಿಲ್ದಾಣಕ್ಕೆ ಬರಬೇಕು. ಅಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯಿಂದ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಅದರಲ್ಲಿ ನೆಗೆಟಿವ್ ವರದಿ ಬಂದವರಿಗೆ ಮಾತ್ರ ಮುಂದಿನ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ಸಂಜೆಯವರೆಗೆ ಪಣಜಿಗೆ 15 ವಿಶೇಷ ಬಸ್ಗಳು ಸಂಚರಿಸಿವೆ. ಅಂದಾಜು 700ಕ್ಕೂ ಹೆಚ್ಚು ಪ್ರಯಾಣಿಕರು ತೆರಳಿದ್ದಾರೆ. ಪ್ರಯಾಣಿಕರ ಬೇಡಿಕೆ ಗಮನಿಸಿ ಮುಂದಿನ ದಿನಗಳಲ್ಲಿ ವಾಸ್ಕೋ ಮತ್ತು ಮಡಗಾಂವಗೆ ಬಸ್ಗಳನ್ನು ಓಡಿಸಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ.
ಓದಿ: ಹಳಿ ತಪ್ಪಿದ ರೈಲು... ಪ್ರಯಾಣಿಕರಿಗೆ ಸಿಕ್ತು 'ದೂದ್ ಸಾಗರ' ಕಣ್ತುಂಬಿಕೊಳ್ಳುವ ಭಾಗ್ಯ!