ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳಿಗೆ ಗೌರವ ಸಮರ್ಪಣೆ ಸಲ್ಲಿಸುವ ಸದುದ್ದೇಶದಿಂದ ಪೊಲೀಸ್ ಹುತಾತ್ಮ ದಿನಾಚರಣೆಯನ್ನು ಜಿಲ್ಲೆಯ ಸಿಎಆರ್ ಪೊಲೀಸ್ ಮೈದಾನದಲ್ಲಿ ಆಚರಿಸಲಾಯಿತು.
ಕಾರವಾರ ರಸ್ತೆಯಲ್ಲಿರುವ ಸಿಎಆರ್ ಪೊಲೀಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಬಿಆರ್‌ಟಿಎಸ್ ನಿರ್ದೇಶಕ ರಾಜೇಂದ್ರ ಚೋಳನ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪೊಲೀಸ್ ಹುದ್ದೆ ಎಂದರೇ ಎಲ್ಲ ಒತ್ತಡಗಳನ್ನು ಬದಿಗಿಟ್ಟು ಸಾರ್ವಜನಿಕ ಸೇವೆಗೆ ಕಂಕಣಬದ್ಧವಾಗಿ ಕಾರ್ಯ ನಿರ್ವಹಿಸುವುದು. ಹೀಗೆ ಎಂತಹ ಸಂದರ್ಭದಲ್ಲೂ ಎದೆಗುಂದದೆ ಸಾರ್ವಜನಿಕ ಸೇವೆಯಲ್ಲಿಯೇ ಹುತಾತ್ಮರಾದ ಪೊಲೀಸ್ ಇಲಾಖೆಯ ಸಿಬ್ಬಂದಿ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಹರಸಿದರು.
ದೇಶದ ಗಡಿಯಲ್ಲಿ ಸೈನಿಕರು ನಮ್ಮನ್ನು ಕಾಯುವಂತೆ ನಾಡಿನಲ್ಲಿ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಸೇವೆಗೆ ನಿಂತಿರುತ್ತಾರೆ. ಕರ್ನಾಟಕ ಪೊಲೀಸ್ ಇಲಾಖೆ ರಾಜ್ಯದಲ್ಲಿ ಮಾದರಿ ಇಲಾಖೆ ಎಂದು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್.ದೀಲಿಪ್ ಸೇರಿ ಇತರ ಪೊಲೀಸ್ ಅಧಿಕಾರಿಗಳು ಭಾಗವಹಿಸಿ ಹುತಾತ್ಮ ಪೊಲೀಸ್ ಅಧಿಕಾರಿಗಳಿಗೆ ಗೌರವ ನಮನ ಸಲ್ಲಿಸಿದರು.