ಹುಬ್ಬಳ್ಳಿ : ಕೊರೊನಾ ವೈರಸ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಕೊರೊನಾ ವಿರುದ್ಧ ಹೋರಾಡಲು ಹುಬ್ಬಳ್ಳಿ ಮತ್ತು ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಗಳು ಎಲ್ಲ ರೀತಿಯಿಂದಲೂ ಸಹಕಾರ ನೀಡುತ್ತಿವೆ. ಆದರೆ, ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುವಂತಹ ವಿಡಿಯೋ, ಫೋಟೋ ಹಾಗೂ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ಇದರಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಕೊಳ್ಳಬೇಕೆಂದು ಹೊರಟ್ಟಿ ನೇತೃತ್ವದ ನಿಯೋಗ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ಸಚಿವ ಎ ಎಂ ಹಿಂಡಸಗೇರಿ, ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಯೂಸೂಫ್ ಸವಣೂರ, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರ್, ಮುಖಂಡರಾದ ಅಲ್ತಾಫ್ ಹಳ್ಳೂರ, ಇಸ್ಮಾಯಿಲ್ ತಮಟಗಾರ ಸೇರಿ ಮುಂತಾದವರಿದ್ದರು.