ಧಾರವಾಡ: ಜಿಲ್ಲೆಯಲ್ಲಿ ಹೆಸರು ಖರೀದಿ ಕೇಂದ್ರವನ್ನು ತೆರೆಯಲು ಅಗ್ರಹಿಸಿ, ಧಾರವಾಡ ಎಪಿಎಂಸಿ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಧಾರವಾಡ ಎಪಿಎಂಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಮಾಡಿದರು. ಅಲ್ಲದೆ ಜಿಲ್ಲೆಯಲ್ಲಿ 46,283 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಈ ಬಾರಿ ರೈತರು ಹೆಸರು ಬೆಳೆದಿದ್ದಾರೆ. ಈಗ ಬೆಳೆಯು ಕಟಾವಿಗೆ ಬಂದಿದೆ. ಸುಮಾರು 3.47 ಲಕ್ಷ ಕ್ವಿಂಟಲ್ ಬೆಳೆ ಬರುವ ನಿರೀಕ್ಷೆ ಇದೆ. ಈಗಾಗಲೇ ಕೇಂದ್ರ ಸರ್ಕಾರ 7,196 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ ಮಾರುಕಟ್ಟೆಯಲ್ಲಿ ಇದಕ್ಕಿಂತ ಕಡಿಮೆ ಬೆಲೆಯಲ್ಲಿ ಮಾರಾಟ ಆಗುತ್ತಿರುವುದು ಕಂಡು ಬಂದಿದೆ ಎಂದು ದೂರಿದರು.
ಹಾಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹೆಸರು ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.