ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ತೆರವುಗೊಳಿಸಿದ್ದನ್ನು ಖಂಡಿಸಿ ಕೂಡಲೇ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಆಗಸ್ಟ್ 15ರಂದು ರಾಯಣ್ಣನ ಹುಟ್ಟುಹಬ್ಬದಂದೇ ಪೀರಣವಾಡಿಯಲ್ಲಿ ಪ್ರತಿಷ್ಟಾಪನೆ ಮಾಡಲಾಗಿದ್ದ ರಾಯಣ್ಣನ ಪ್ರತಿಮೆಯನ್ನು ತೆರವುಗೊಳಿಸಿದ್ದನ್ನು ರಾಯಣ್ಣನ ಅಭಿಮಾನಿಗಳು ತೀವ್ರವಾಗಿ ಖಂಡಿಸುತ್ತಾರೆ. ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ ಪ್ರತಿಮೆಯನ್ನು ಅಗೌರವವಾಗಿ ವಾಹನದಲ್ಲಿ ಹಾಕಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದು ಕನ್ನಡಿಗರಿಗೆ ಆದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸರ್ಕಾರ ಮಧ್ಯ ಪ್ರವೇಶ ಮಾಡಿ ತೆರವುಗೊಳಿಸಿದ ಜಾಗದಲ್ಲಿಯೇ ರಾಯಣ್ಣ ಪ್ರತಿಮೆಯನ್ನು ಮರು ಪ್ರತಿಷ್ಠಾಪನೆ ಮಾಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಜೊತೆಗೆ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.