ಹುಬ್ಬಳ್ಳಿ: ಪ್ರಯಾಣಿಕರ ಹಿತದೃಷ್ಟಿಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಿಸಿ ಸ್ಯಾನಿಟೈಸೇಷನ್ ಮಾಡಲಾಗಿರುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಭೀತಿಯಿಂದಾಗಿ ಮೊದಲೇ ಪ್ರಯಾಣಿಕರ ಕೊರತೆ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗೆ ಇತ್ತೀಚೆಗೆ ಎಡೆಬಿಡದೆ ಕಾಡುತ್ತಿರುವ ಮಳೆ ಅಕ್ಷರಶಃ ಕಂಟಕವಾಗಿ ಪರಿಣಮಿಸಿ ಹೆಚ್ಚಿನ ಆರ್ಥಿಕ ಸಂಕಷ್ಟ ತಂದಿಟ್ಟಿದೆ ಎಂದರು.
ಹುಬ್ಬಳ್ಳಿ ವಿಭಾಗದ ಬಸ್ಸುಗಳಲ್ಲಿ ದಿನದಿಂದ ದಿನಕ್ಕೆ ನಿಧಾನವಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಚೇತರಿಕೆ ಕಂಡುಬಂದಿತ್ತು. ಅದರಂತೆ ಬಸ್ಸುಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, ನಿತ್ಯವೂ ಸಂಸ್ಥೆಗೆ 14 ರಿಂದ 15 ಲಕ್ಷ ರೂ. ಆದಾಯ ಸಂಗ್ರಹವಾಗುತ್ತಿದೆ. ಆ. 14 ರಂದು ಶ್ರಾವಣ ಶುಕ್ರವಾರ, 15 ರಂದು ಶನಿವಾರ ಸ್ವಾತಂತ್ರ್ಯ ದಿನಾಚರಣೆ ರಜೆ ಮತ್ತು 16 ರಂದು ರವಿವಾರ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಾಗಿರುವುದರಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸಲಾಗಿತ್ತು. ಆದರೆ ನಿರಂತರ ಮೋಡ ಮುಸುಕಿದ ವಾತಾವರಣ ಹಾಗೂ ಆಗಾಗ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ ಎಂದರು.
ಸಾರಿಗೆ ಸಂಸ್ಥೆಯ ಪರಿಸ್ಥಿತಿಯೀಗ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಇದರಿಂದಾಗಿ ಬರುತ್ತಿದ್ದ ಅಲ್ಪಸ್ವಲ್ಪ ಆದಾಯವೂ ಕೈ ತಪ್ಪಿ ಹೋಗುತ್ತಿದೆ ಎಂದು ರಾಮನಗೌಡರ ಮಾಹಿತಿ ನೀಡಿದರು.