ಧಾರವಾಡ: ನಾಳೆಯಿಂದ ಶಾಲೆ ಆರಂಭ ಹಿನ್ನೆಲೆ ಜಿಲ್ಲೆಯ ಬಹುತೇಕ ಶಾಲೆಗಳು ಸಕಲ ರೀತಿಯಲ್ಲಿ ಸಜ್ಜುಗೊಂಡಿವೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನ ಕುಮಾರ್ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಬಳಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅವರು, ಪಾಲಕರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಹೊಸ ವರ್ಷದಿಂದ ಶಾಲೆಗಳು ಆರಂಭಗೊಳ್ಳುತ್ತಿವೆ. ಬೆಳಗಿನ ಅವಧಿಯಲ್ಲಿ ಶಾಲೆಗಳಲ್ಲಿ ತರಗತಿ ನಡೆಯುತ್ತವೆ. ಮಧ್ಯಾಹ್ನ ವಿದ್ಯಾಗಮ ನಡೆಸಲಾಗುವುದು. ಅದಕ್ಕಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯ ತರಬೇತಿ ಸಹ ನೀಡಲಾಗಿದೆ ಎಂದರು.
ಇತ್ತ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದ್ವಿತೀಯ ಪಿಯುಸಿ ಹಾಗೂ ಶಾಲಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ರೋಟರಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಬೆಳಗ್ಗೆಯಿಂದಲೇ ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸರ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.