ಹುಬ್ಬಳ್ಳಿ: ರಾಜ್ಯದ ಜನತೆಯ ಹಿತದೃಷ್ಟಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪ್ರತಿಭಟನೆ ನಡೆಸಿ, ರಾಜ್ಯದ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಲಾಯಿತು.
ಲಾಕ್ಡೌನ್ನಿಂದ ರಾಜ್ಯದ ಜನತೆ ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಆದರೆ ಇದನ್ನು ಲೆಕ್ಕಿಸದೆ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಖಂಡನೀಯ. ರಾಜ್ಯದ ಸಾರ್ವಜನಿಕರ ಹಿತದೃಷ್ಟಿಯಿಂದ ಏಪ್ರಿಲ್ ಮತ್ತು ಮೇ ತಿಂಗಳ ವಿದ್ಯುತ್ ಬಿಲ್ ಅನ್ನು ರಾಜ್ಯ ಸರ್ಕಾರ ಮನ್ನಾ ಮಾಡಬೇಕು. ದೆಹಲಿ ಸರ್ಕಾರ ವಿದ್ಯುತ್ ಬಿಲ್ ಮನ್ನಾ ಮಾಡಿದೆ. ಅದೇ ರೀತಿ ರಾಜ್ಯ ಸರ್ಕಾರ ಮುಂದಾಗಿ ಕಾರ್ಮಿಕ ವರ್ಗಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಲಾಯಿತು.
ಸರ್ಕಾರ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಮಾಡಿದೆ. ಅದನ್ನು ಕೂಡಲೇ ರದ್ದು ಮಾಡಬೇಕು. ಈ ತಿದ್ದುಪಡಿ ಕಾಯ್ದೆಯಲ್ಲಿ ರೈತರ ಹಿತಾಸಕ್ತಿ ಇಲ್ಲ. ಇದರಿಂದ ರೈತರಿಗೆ ಸಂಕಷ್ಟದ ದಿನಗಳು ಎದುರಾಗಲಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ ಇದಕ್ಕೆ ತಗುಲುವ ವೆಚ್ಚವನ್ನು ಭರಿಸಲು ಸಹ ಬೆಲೆ ನಿಗದಿಗೊಳಿಸಿದೆ. ಈ ಕ್ರಮ ಸರಿಯಲ್ಲ. ಇದನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಲಾಯಿತು.
ಪೆಟ್ರೋಲಿಯಂ ತೈಲದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಜನತೆಯ ಜೇಬಿಗೆ ಕತ್ತರಿ ಬೀಳುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳಿಂದ ಇನ್ನಿತರ ವಸ್ತುಗಳ ಬೆಲೆಗಳು ಗಗನಕ್ಕೆ ಏರುವ ಕಾರಣ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಬೀಳಲಿದೆ. ಆದ್ದರಿಂದ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೂಡಲೇ ಇಳಿಸಬೇಕು ಎಂದು ಒತ್ತಾಯಿಸಿದರು.