ಶಿವಮೊಗ್ಗ: ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ.
ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ.
![section 144 implimented](https://etvbharatimages.akamaized.net/etvbharat/prod-images/kn-dwd-4-hijab-dc-order-av-ka1000q_14032022212544_1403f_1647273344_479.jpg)
ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹೈಕೋರ್ಟ್ ನೀಡುವ ತೀರ್ಪಿಗೆ ಜನರು ಬದ್ಧರಾಗಿದ್ದು, ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ಯಾವುದೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
![section 144 implimented](https://etvbharatimages.akamaized.net/etvbharat/prod-images/kn-dwd-4-hijab-dc-order-av-ka1000q_14032022212544_1403f_1647273344_977.jpg)
ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಮುಂದೂಡಿಕೆ
ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.
ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು ಮೊದಲೇ ನಿಗದಿಯಾದಂತೆ ಆಯಾ ಮೂರೂ ಕೇಂದ್ರಗಳಲ್ಲಿ ನಾಳೆಯೇ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಯಾದ್ಯಂತ 144 ಸೆಕ್ಷನ್ ಜಾರಿ.. ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮಾರ್ಚ್ 15 ರಂದು ಉಚ್ಛ ನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು, ಈ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ (ಗ್ರಾಮೀಣ) ಮತೀಯ ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರಲು 15 ರಂದು ಬೆಳಗ್ಗೆ 6 ಗಂಟೆಯಿಂದ 19 ರ ಬೆಳಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ -ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಬಡಿಗೆ ಭರ್ಚಿ, ಖಡ್ಗ , ಗದೆ , ಬಂದೂಕು, ಚೂರಿ, ಲಾಠಿ, ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಇತರ ಎಸೆಯುವಂತಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ.
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 18 ರ ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಓದಿ: ನಾಳೆ ಹೈಕೋರ್ಟ್ನಿಂದ ಹಿಜಾಬ್ ಅಂತಿಮ ತೀರ್ಪು.. ಬೆಂಗಳೂರಲ್ಲಿ ಒಂದು ವಾರ 144 ಸೆಕ್ಷನ್ ಜಾರಿ