ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರದ 46 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ SSLC ಪರೀಕ್ಷೆಗಳು ನಡೆಯಲಿದ್ದು, ಮುಂಜಾಗ್ರತ ಕ್ರಮವಾಗಿ ಸೆಕ್ಷನ್144 ಜಾರಿಗೊಳಿಸಲು ನಿರ್ಧರಿಸಲಾಗಿದೆ.
ಪರೀಕ್ಷಾ ಅವಧಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಗಟ್ಟಲು, ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ 144 ಜಾರಿಗೊಳಿಸಲಾಗುತ್ತೆ ಎಂದು ಆದೇಶ ಹೊರಡಿಸಲಾಗಿದೆ. ಜೊತೆಗೆ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಆರ್.ದಿಲೀಪ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಈಗಾಗಲೇ ಘೋಷಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸಮೀಪವಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಸೆಂಟರ್, ಅಂಗಡಿಗಳು ಪರೀಕ್ಷಾ ಸಮಯದಲ್ಲಿ ಕಾರ್ಯನಿರ್ವಹಿಸದಂತೆ ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ. ಈ ಆಜ್ಞೆ ಉಲ್ಲಂಘಿಸುವವರ ವಿರುದ್ಧ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಜೂನ್ 18 ರಂದು ನಡೆಯುವ ಪಿಯುಸಿ ಪರೀಕ್ಷೆಗೆ ಸಹ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಅಂದು ಕೂಡಾ ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಎಲ್ಲಾ ಅಂಗಡಿಗಳನ್ನು ಬಂದ್ ಮಾಡುವಂತೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.