ಹುಬ್ಬಳ್ಳಿ: ರಾಜ್ಯ ಸರ್ಕಾರ ಸೂಕ್ತ ನಿರ್ದೇಶನಗಳ ಮೂಲಕ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶ್ರೀರಾಮ ಸೇನಾ ವತಿಯಿಂದ ಸಂಘಟನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿಂದು ವಿಜಯೋತ್ಸವ ಆಚರಿಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಬಳಿಕ ಮಾತನಾಡಿದ ಅವರು, ಶ್ರೀರಾಮ ಸೇನಾ ಹೋರಾಟದ ಪ್ರತಿಫಲವಾಗಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದೆ ಎಂದರು.
ಎಷ್ಟೋ ಜನ ಕಲಾವಿದರು ಆತ್ಮಹತ್ಯೆಗೆ ಮುಂದಾಗಿದ್ದರು. ಅಲ್ಲದೆ ಗಣೇಶೋತ್ಸವವನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಕುಟುಂಬಗಳು ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿದ್ದವು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ತೆಗೆದುಕೊಂಡ ತೀರ್ಮಾನ ಸ್ವಾಗತಾರ್ಹವಾಗಿದೆ ಎಂದು ಅಭಿನಂದನೆ ಸಲ್ಲಿಸಿದರು.
ರಾಜ್ಯ ಸರ್ಕಾರ ಇನ್ನೂ ಸ್ವಲ್ಪ ಮುಂಚಿತವಾಗಿಯೇ ತೀರ್ಮಾನವನ್ನು ತೆಗೆದುಕೊಳ್ಳಬೇಕಿತ್ತು. ಆಗ ಕಲಾವಿದರ ಆತ್ಮಸ್ಥೈರ್ಯ ಹೆಚ್ಚಿಸಲು ಸಾಧ್ಯವಾಗುತ್ತಿತ್ತು ಎಂದ ಮುತಾಲಿಕ್, ಶ್ರೀರಾಮ ಸೇನಾ ಸಂಘಟನೆ ಏಕಾಂಗಿಯಾಗಿ ಹೋರಾಟ ನಡೆಸಿದ್ದು, ಹೋರಾಟಕ್ಕೆ ಜಯಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.