ಹುಬ್ಬಳ್ಳಿ: ಅವಳಿನಗರ ಹುಬ್ಬಳ್ಳಿ ಧಾರವಾಡ ವ್ಯಾಪ್ತಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಇಂದು ವಿಶೇಷ ಕಾರ್ಯಾಚರಣೆ ಕೈಗೊಂಡರು. ಪೊಲೀಸ್ ಕಮೀಷನರೇಟ್ ಆದೇಶದಂತೆ ಪೊಲೀಸರು ಅವಳಿ ನಗರದ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಪೊಲೀಸರು ಈಗಾಗಲೇ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಓಸಿ, ಮಟ್ಕಾ, ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅವುಗಳಲ್ಲದೇ ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದ ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳಗ್ಗೆ ಅನಿರೀಕ್ಷಿತ ದಾಳಿ ನಡೆಸಿದರು. ಉತ್ತರ, ದಕ್ಷಿಣ ಹಾಗೂ ಧಾರವಾಡ ಉಪವಿಭಾಗಗಳ ವ್ಯಾಪ್ತಿ ಒಟ್ಟು 172 ರೌಡಿಶೀಟರ್ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿರುವ ಪೊಲೀಸರು, ಮುಂದಿನ ದಿನಗಳಲ್ಲಿ ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿ ಅವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದಾರೆ.
ರೌಡಿಶೀಟರ್ ಮನೆಯಲ್ಲಿ ಮಾರಕಾಸ್ತ್ರ ಪತ್ತೆ: ದಾಳಿ ವೇಳೆ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿ ರೌಡಿಶೀಟರ್ ಷಣ್ಮುಗ ರವೀಂದ್ರ ಗುಡಿಹಾಳ ಎಂಬುವನ ಮನೆಯಲ್ಲಿ ಮಾರಕಾಸ್ತ್ರಗಳು ದೊರೆತಿವೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಒಟ್ಟು 05 ರೌಡಿಶೀಟರ್‌ಗಳ ಮೇಲೆ ಸಿಆರ್‌ಪಿಸಿ ಕಾಯ್ದೆಯಡಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿರುತ್ತದೆ.
ಇನ್ನೂ ವಿವಿಧ ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿ ತಲೆ ಮರೆಸಿಕೊಂಡಿದ್ದ 3 ಜನ ರೌಡಿಶೀಟರ್‌ಗಳು ಸಿಕ್ಕಿಬಿದ್ದಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. ಹುಬ್ಬಳ್ಳಿ ಧಾರವಾಡ ನಗರದಲ್ಲಿ ಯಾವುದೇ ರೀತಿಯ ರೌಡಿಸಂ - ಪುಂಡಾಟ ಚಟುವಟಿಕೆಗಳಿಗೆ ಅವಕಾಶವಿಲ್ಲ (Zero tolerance) ಎಂಬುದನ್ನು ಈ ಮೂಲಕ ತಿಳಿಸಿದ್ದು, ಒಂದು ವೇಳೆ ಅಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಅವರುಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆ ಭರ್ತಿ: ಮುಂದಿನ ಆರು ತಿಂಗಳಲ್ಲಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ 4547 ಮಂದಿಯನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಪೈಕಿ 1547 ಮಂದಿ ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳು, 3000 ಮಂದಿ ಕಾನ್ಸ್ಟೇಬಲ್ಗಳು ಇರಲಿದ್ದಾರೆ ಎಂದು ಹೇಳಿದರು. ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆ 545 ಮಂದಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಅಂತ್ಯದೊಳಗಾಗಿ ಭರ್ತಿ ಮಾಡಲಾಗುವುದು. ನಂತರ 402 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ಹುದ್ದೆ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಇದನ್ನೂಓದಿ:ಹುಬ್ಬಳ್ಳಿ: ಏಳು ಜನರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು ಮಾಡಿದ ಕರವೇ ಕಾರ್ಯಕರ್ತ