ಅಳ್ನಾವರ (ಧಾರವಾಡ): ಮಕ್ಕಳ ಭವಿಷ್ಯದ ಅಡಿಪಾಯ ಎಂದು ಗುರುತಿಲ್ಪಡುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ಹಿಡಿದು ಧೈರ್ಯದಿಂದ ಪರೀಕ್ಷಾ ಕೇಂದ್ರದ ಒಳಗೆ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕೊರೊನಾ ಸೋಂಕು ಹರಡದಂತೆ ತಡೆಯಲು ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡ ಶಿಕ್ಷಣ ಇಲಾಖೆ, ಇತಿಹಾಸದಲ್ಲಿಯೇ ಪ್ರಥಮ ಬಾರಿ ವಿನೂತನವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಶಾಲಾ ಮೈದಾನದಲ್ಲಿ ತೆರೆದ ಆರೋಗ್ಯ ತಪಾಸಣಾ ಕೌಂಟರ್ ನಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಕೈಗಳಿಗೆ ಸ್ಯಾನಿಟೈಸರ್ ಹಾಕಿ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗುತ್ತಿದೆ.
ಪರೀಕ್ಷೆ 10.30 ಕ್ಕೆ ಆರಂಭವಾಗಿ ಮಧ್ಯಾಹ್ನ 1.45 ಮುಗಿಯಲಿದೆ. ಇಂದು ಇಂಗ್ಲಿಷ್ ಪರೀಕ್ಷೆ ಇದ್ದು, 10.15 ಕ್ಕೆ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಪಟ್ಟಣದಲ್ಲಿ ಎರಡು ಕೇಂದ್ರಗಳಲ್ಲಿ ಒಟ್ಟು 665 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಕರ ಜೊತೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.
ವಿದ್ಯಾರ್ಥಿಗಳೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಎಂದು ಶಿಕ್ಷಕರು ಮಾರ್ಗದರ್ಶನ ನೀಡುತ್ತಿರುವ ಸನ್ನಿವೇಶಗಳು ಸಹ ಕಂಡುಬಂದವು.