ಹುಬ್ಬಳ್ಳಿ: ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಆತ್ಮಹತ್ಯೆ ಅಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಬಾರದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಮನವಿ ಮಾಡಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಯಾವುದೇ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಾರದು. ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆ ವಿನಃ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದರು.
ದೌರ್ಜನ್ಯಕ್ಕೆ ಒಳಗಾದ ಮಹಿಳೆ ಕುಟುಂಬದವರು ಧೃತಿಗೆಡದೆ ಕಾನೂನು ಸಲಹೆ ಪಡೆದುಕೊಂಡು ಕಾನೂನಾತ್ಮಕ ಹೋರಾಟ ನಡೆಸಬೇಕು. ಅಲ್ಲದೇ ತಕ್ಷಣ ಪೋಷಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೇ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಸಹಾಯಕ ಆಗುತ್ತದೆ ಎಂದು ಅವರು ಹೇಳಿದರು.
ತೃತೀಯ ಲಿಂಗಿಗಳಿಗೆ ಆಶ್ರಯ ಯೋಜನೆ ಅಡಿಯಲ್ಲಿ ಮನೆಗಳನ್ನು ನೀಡುವ ಚಿಂತನೆ ನಡೆಸಿದ್ದು, ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಮುಂಬರುವ ದಿನಗಳಲ್ಲಿ ತೃತೀಯ ಲಿಂಗಿಗಳಿಗೂ ಸೂರು ಕಲ್ಪಿಸಲಾಗುತ್ತದೆ ಎಂದು ಭರವಸೆ ನೀಡಿದರು.