ಧಾರವಾಡ: ಕೋವಿಡ್-19 ಪ್ರಕರಣಗಳು ಕಳೆದ ವರ್ಷದಂತೆ ಪ್ರಸಕ್ತ ತಿಂಗಳಿನಲ್ಲಿಯೂ ಹೆಚ್ಚಳವಾಗುತ್ತಿವೆ. ಮಾಸ್ಕ್ ಧರಿಸದೆ ಸಂಚರಿಸುವುದು, ಸಾಮಾಜಿಕ ಅಂತರ ಕಾಪಾಡದಿರುವುದು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ನೀಡಿರುವ ಮುಂಜಾಗ್ರತಾ ಕ್ರಮಗಳನ್ನು ಜನತೆ ಪಾಲಿಸದಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಜರುಗಿದ ವಿಡಿಯೋ ಕಾನ್ಫರೆನ್ಸ್ ನಂತರ ಜಿಲ್ಲಾ ಆರೋಗ್ಯ ಪಡೆಯ ಹಾಗೂ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಕಳೆದ ಕೋವಿಡ್ ಸಂದರ್ಭದಲ್ಲಿ ರಚಿಸಿದ್ದ ಎಲ್ಲ ತಂಡಗಳನ್ನು ಮರುಸ್ಥಾಪನೆ ಮಾಡಿ, ಕಾರ್ಯಗಳ ಹಂಚಿಕೆ ಮತ್ತು ಪರಿಶೀಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.
ಸಾರ್ವಜನಿಕರು ಆರೋಗ್ಯ ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸಿದರೆ, ಕೋವಿಡ್ ಪ್ರಕರಣಗಳ ಹೆಚ್ಚಳದಿಂದ ಮುಂದಿನ ಕೆಲವು ತಿಂಗಳು ಕಷ್ಟದ ದಿನಗಳಾಗಲಿವೆ. ಜಿಲ್ಲಾಸ್ಪತ್ರೆ ಹಾಗೂ ಕಿಮ್ಸ್ ಆಸ್ಪತ್ರೆಗಳು ಅಗತ್ಯ ಹಾಸಿಗೆ ವ್ಯವಸ್ಥೆಯನ್ನು ಸಿದ್ಧಗೊಳಿಸಿಕೊಳ್ಳಬೇಕು. ಕೋವಿಡ್ ಕೇರ್ ಸೆಂಟರ್ಗಳನ್ನು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆರಂಭಿಸಲು ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಶಿಫ್ಟಿಂಗ್ ತಂಡ, ಕಾಂಟ್ಯಾಕ್ಟ್ ಟ್ರೆಸಿಂಗ್ ತಂಡಗಳು ಕ್ರಿಯಾಶೀಲವಾಗಬೇಕು. ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯನಿರತವಾಗಿದ್ದು, ಅದರ ಸೇವೆಯನ್ನು ಮುಂದುವರೆಸಲಾಗುವುದು. ಕೋವಿಡ್ ಪರೀಕ್ಷಿಸುವ ಪ್ರಯೋಗಾಲಯಗಳಿಗೆ ಅಗತ್ಯವಿರುವ ಮಾನವ ಸಂಪನ್ಮೂಲದ ಬೇಡಿಕೆಯನ್ನು ತಕ್ಷಣ ಸಲ್ಲಿಸುವಂತೆ ಸೂಚಿಸಿದರು.
ಕೋವಿಡ್ ಕರ್ತವ್ಯ ನಿರ್ಲಕ್ಷಿಸಿದರೆ ಸೇವೆಯಿಂದ ವಜಾ: ಕೋವಿಡ್-19 ರ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಕೆಲವು ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸಿದ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷಿಸಿರುವ ಕುರಿತು ತಿಳಿದುಬಂದಿದೆ. ಸಂಬಂಧಿಸಿದ ತಂಡಗಳ ಮುಖ್ಯಸ್ಥರು ಕರ್ತವ್ಯಕ್ಕೆ ಹಾಜರಾಗದವರ ಕುರಿತು ವರದಿ ಸಲ್ಲಿಸಿದರೆ, ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಖಾಸಗಿ ಬಸ್ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲೆಗೆ ಪ್ರತಿದಿನ ವಿವಿಧ ಖಾಸಗಿ ಹಾಗೂ ಸರ್ಕಾರಿ ಬಸ್ ಮೂಲಕ ಹೊರರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ವರದಿ ಹೊಂದಿರದಿದ್ದಲ್ಲಿ ಪ್ರತಿ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಮೂಲಕ ಸ್ಥಳದಲ್ಲಿಯೇ ಕೋವಿಡ್ ಟೆಸ್ಟ್ ಮಾಡಬೇಕು. ಇದು ಪ್ರತಿ ದಿನ ಪುನರಾವರ್ತನೆಯಾದರೆ ಅಂಥ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿ ಅಂಥ ಬಸ್‍ನ್ನು ಪ್ರಯಾಣಿಕರ ಸಮೇತ ಮರಳಿ ಕಳುಹಿಸಬೇಕು ಅಥವಾ ಸೀಜ್ ಮಾಡಬೇಕೆಂದು ಪಾಲಿಕೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
![strict-rules-will-be-enforced-if-protocols-not-followed-d-c-nithesh-patil](https://etvbharatimages.akamaized.net/etvbharat/prod-images/kn-dwd-2-susheela-meeting-av-ka10001_26032021141312_2603f_1616748192_654.jpg)
ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ: ಲಸಿಕಾಕರಣದ ಕಾರ್ಯವನ್ನು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಚುರುಕುಗೊಳಿಸಲು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ. ತಿಳಿಸಿದ್ದಾರೆ. ನಗರದ ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಪಡೆಯ ಹಾಗೂ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಓದಿ: ಸಿಡಿ ಪ್ರಕರಣ.. ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಪರ ದೂರು ನೀಡಿದ ವಕೀಲ ಜಗದೀಶ್ ಹೀಗಂತಾರೆ..