ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನವು ನಾಳೆ ಅಕ್ಟೋಬರ್ 28 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಮತದಾನಕ್ಕೆ ಅರ್ಹತೆ ಪಡೆದಿರುವ ನೋಂದಾಯಿತ ಮತದಾರರಿಗೆ ಅವರು ಕರ್ತವ್ಯ ನಿರ್ವಹಿಸುವ ಉದ್ಯಮ, ಶಿಕ್ಷಣ ಸಂಸ್ಥೆ, ಸಂಘ ಸಂಸ್ಥೆಗಳು, ವ್ಯಾಪಾರ ಘಟಕಗಳು, ಸರ್ಕಾರಿ, ಅರೆಸರ್ಕಾರಿ, ಖಾಸಗಿ ಹಾಗೂ ಇತರ ಎಲ್ಲ ಕಚೇರಿಗಳ ಮುಖ್ಯಸ್ಥರು ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಆದೇಶ ಹೊರಡಿಸಿದ್ದಾರೆ.
ಮತ ಚಲಾವಣೆಗೆ ತೆರಳಲು ಅವಕಾಶ ನೀಡದೇ ಮತದಾನದ ಹಕ್ಕು ಕಸಿದುಕೊಳ್ಳುವ ಪ್ರಯತ್ನ ಮಾಡಿದರೆ ಭಾರತೀಯ ದಂಡ ಸಂಹಿತೆಯ ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು. ಆದ್ದರಿಂದ ಜಿಲ್ಲೆಯ ಪದವೀಧರ ಮತದಾರರು ಮತ ಚಲಾಯಿಸಲು ಯಾವುದೇ ಸಂಸ್ಥೆ, ಕಚೇರಿಗಳು ಅಡ್ಡಿಪಡಿಸದೇ ಮತ ಚಲಾವಣೆಗೆ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.