ಹುಬ್ಬಳ್ಳಿ: ಹುಬ್ಬಳ್ಳಿ ಜನರ ಬಹುನಿರೀಕ್ಷಿತ ಬೇಡಿಕೆಯಲ್ಲಿ ಒಂದಾಗಿರುವ ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸದ್ಗುರು ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಸುರೇಶ ಅಂಗಡಿಯವರು ಪ್ರಸ್ತಾವನೆ ಸಲ್ಲಿಸಿದ ಬೆನ್ನಲ್ಲೇ ಹುಬ್ಬಳ್ಳಿ ರೈಲು ನಿಲ್ದಾಣದ ಹೆಸರು ಬದಲಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹುಬ್ಬಳ್ಳಿಯ ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶದ ಪ್ರತಿ ರವಾನೆ ಮಾಡಲಾಗಿದ್ದು, ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಟ್ವಿಟರ್ ಮೂಲಕ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವರಾದ ಸುರೇಶ ಅಂಗಡಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಸಿದ್ಧಾರೂಢ ರೈಲ್ವೇ ನಿಲ್ದಾಣವೆಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ರೈಲು ನಿಲ್ದಾಣದ ಹೆಸರು ಬದಲಿಸಿ ಆದೇಶ ಹೊರಡಿಸಲಾಗಿದ್ದು, ಹುಬ್ಬಳ್ಳಿ ಜನತೆಯ ಆಸೆ ಫಲಿಸಿದೆ. ಅಲ್ಲದೇ ಹುಬ್ಬಳ್ಳಿ ಜನರ ಬೇಡಿಕೆಗೆ ಸ್ಪಂದಿಸಿದ ಸುರೇಶ ಅಂಗಡಿ ಅವರಿಗೆ ಹಾಗೂ ಕೇಂದ್ರ ಸಚಿವರಿಗೆ ಹುಬ್ಬಳ್ಳಿ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.