ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯು, ವೈಶುದೀಪ್ ಫೌಂಡೇಶನ್ ಸಹಯೋಗದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಇಂದಿನಿಂದ 2020 ರ ಫೆ.24 ರವರೆಗೆ ಪ್ರತಿ ಸೋಮವಾರ ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮಗಳು ಜರುಗಲಿವೆ. ವಿದ್ಯಾಸ್ನೇಹಿ ಉಚಿತ ಸಹಾಯವಾಣಿ ಸಂಖ್ಯೆ 18004255540 ಸಂಪರ್ಕಿಸಿ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪಠ್ಯಾಧಾರಿತ ಹಾಗೂ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯಬಹುದು. ವಿದ್ಯಾರ್ಥಿಗಳು ಪಠ್ಯವನ್ನು ಕೇಂದ್ರೀಕರಿಸಿ ಅಧ್ಯಯನ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ ಸಹಾಯವಾಣಿ ಮೂಲಕ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಪಠ್ಯದ ಯಾವುದೇ ಭಾಗವನ್ನು ನಿರ್ಲಕ್ಷ್ಯ ಮಾಡದೇ ಅಭ್ಯಾಸ ಮಾಡಬೇಕು, ಯಾವುದೇ ಪ್ರಶ್ನೆಗಳಿಗೂ ಉತ್ತರಿಸುವ ಸಾಮರ್ಥ್ಯ ಗಳಿಸಿಕೊಳ್ಳಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮನ್ನಿಕೇರಿ ಮಾತನಾಡಿ, ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈ ಬಾರಿ ನೀಲಿನಕ್ಷೆ ಮಾದರಿ ಕೈ ಬಿಟ್ಟಿದೆ. ವಿದ್ಯಾರ್ಥಿಗಳು ಎಲ್ಲಾ ವಿಷಯಗಳಿಗೂ ಸಮಾನ ಆದ್ಯತೆ ನೀಡಿ ಸಿದ್ಧತೆ ಮಾಡಿಕೊಳ್ಳಬೇಕು .ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ವಿಷಯ ತಜ್ಞರು ನಿಮ್ಮ ಸಂದೇಹಗಳನ್ನು ಪರಿಹರಿಸುತ್ತಾರೆ ಎಂದರು.